ನ.24ರಂದು ಮಂಗಳೂರಿನಲ್ಲಿ ಎಂಪಿಎಂಎಲ್‌ಎ ನ್ಯೂಸ್‌ನ 14ನೇ ಸೌಹಾರ್ದ ಸಂಗಮ; ಗಣ್ಯರಿಗೆ ಜನಸೇವಾ, ಸಮಾಜ ರತ್ನ ಪ್ರಶಸ್ತಿ ಪ್ರದಾನ

0
13

ಮಂಗಳೂರು : ಡಾ. ಅಶೋಕ್ ಶೆಟ್ಟಿ ಬಿ.ಎನ್. ಅವರ ಸಾರಥ್ಯದ ಎಂಪಿಎಂಎಲ್‌ಎ ನ್ಯೂಸ್ ವತಿಯಿಂದ 14ನೇ ವರ್ಷದ ಸೌಹಾರ್ದ ಸಂಗಮ ಕಾರ್ಯಕ್ರಮವು ನವೆಂಬರ್ 24ರಂದು ಮಂಗಳವಾರ ಸಂಜೆ 4ರಿಂದ ರಾತ್ರಿ 9ರವರೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನ (ಟೌನ್‌ಹಾಲ್)ದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯು.ಟಿ. ಖಾದರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಜನಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರಿಗೆ ಸಮಾಜ ರತ್ನ ಪ್ರಶಸ್ತಿ, ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಅವರಿಗೆ ಬೆಸ್ಟ್ ಆಫೀಸರ್ಸ್ ಅವಾರ್ಡ್ ಹಾಗೂ ಕೆಎಂಸಿ ಆಸ್ಪತ್ರೆಯ ಹೆಚ್ಚುವರಿ ಪ್ರಾಧ್ಯಾಪಕಿ, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ, ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸಕಿ ಡಾ. ನೀನಾ ಎ. ಮಹಾಲೆ ಅವರಿಗೆ ಬೆಸ್ಟ್ ಡಾಕ್ಟರ್ಸ್ ಅವಾರ್ಡ್ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಾರ್ಯಕ್ರಮದ ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ.ಎನ್. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗಣ್ಯರಿಂದ ಕಾರ್ಯಕ್ರಮ ಉದ್ಘಾಟನೆ

14ನೇ ಸೌಹಾರ್ದ ಸಂಗಮವನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಡಾ. ಎ. ಸದಾನಂದ ಶೆಟ್ಟಿ ಹಾಗೂ ಹಿರಿಯ ನ್ಯಾಯವಾದಿ ಕೆ. ದಯಾನಂದ ರೈ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಆರ್‌ಬಿಐ ಉತ್ತರ ವಲಯದ ಮಾಜಿ ನಿರ್ದೇಶಕ ಸಹಕಾರ ರತ್ನ ಡಾ. ಅಗರಿ ನವೀನ್ ಭಂಡಾರಿ, ಮಂಗಳೂರು ಮಾಜಿ ಮೇಯರ್ ಹಾಗೂ ಕಾರ್ಡೊಲೈಟ್ ಕಂಪನಿಯ ಜನರಲ್ ಮ್ಯಾನೇಜರ್ ದಿವಾಕರ್ ಕದ್ರಿ ಸೇರಿದಂತೆ ಹಲವು ಗಣ್ಯರು ಸಾಧಕರನ್ನು ಸನ್ಮಾನಿಸಲಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣರು ಆಶೀರ್ವಚನ ನೀಡಲಿದ್ದಾರೆ.

ಗಣ್ಯರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರ್ನಾಟಕ ಸ್ಟೇಟ್ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ. ಇಫ್ತಿಕಾರ್ ಅಲಿ, ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಹಾಗೂ ಸ್ಮಾರ್ಟ್ ಸಿಟಿ ಮಂಗಳೂರು ವ್ಯವಸ್ಥಾಪಕ ನಿರ್ದೇಶಕ ಡಾ. ಜಿ. ಸಂತೋಷ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಮಂಗಳೂರು ದಕ್ಷಿಣ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ರಾಘವೇಂದ್ರ ಎಂ. ಬೈಂದೂರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.

ಇದಲ್ಲದೆ, ಶಿಕ್ಷಣ, ಉದ್ಯಮ, ಕಲೆ, ಸಾಹಿತ್ಯ, ವೈದ್ಯಕೀಯ, ಕ್ರೀಡೆ, ಪತ್ರಿಕೋದ್ಯಮ ಹಾಗೂ ಸಾಮಾಜಿಕ ಕ್ಷೇತ್ರಗಳ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಗ್ ರಂಗ್ ಸಂಗೀತ ರಸಮಂಜರಿ, ತುಳು ನಾಟಕ ‘ಬ್ರಹ್ಮರಕ್ಕಸೆ’ ಪ್ರದರ್ಶನ

ಸೌಹಾರ್ದ ಸಂಗಮದ ಅಂಗವಾಗಿ ಚಲನಚಿತ್ರ ಗಾಯಕ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಪ್ರಭು ಮತ್ತು ಬಳಗದ ಗಾಯಕ-ಗಾಯಕಿಯರ ರಾಗ್ ರಂಗ್ ತಂಡದಿಂದ ಸೌಹಾರ್ದ ಸಂಗೀತ ರಸಮಂಜರಿ ನಡೆಯಲಿದೆ.

ಸಂಜೆ 6 ಗಂಟೆಗೆ ನರೇಶ್ ಸಸಿಹಿತ್ಲು ನಿರ್ದೇಶನದ ತ್ರಿನೇತ್ರ ಕಲಾವಿದರ ಈ ವರ್ಷದ ವಿಭಿನ್ನ ತಂತ್ರಜ್ಞಾನದ ಅದ್ದೂರಿ ಸೂಪರ್ ಹಿಟ್ ತುಳು ನಾಟಕ ‘ಬ್ರಹ್ಮರಕ್ಕಸೆ’ ಉಚಿತವಾಗಿ ಪ್ರದರ್ಶನಗೊಳ್ಳಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಪ್ರಾಯೋಜಕತ್ವ ವಹಿಸಲಿದೆ.

ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ 14ನೇ ಸೌಹಾರ್ದ ಸಂಗಮವನ್ನು ಯಶಸ್ವಿಗೊಳಿಸುವಂತೆ ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ.ಎನ್. ಮನವಿ ಮಾಡಿದ್ದಾರೆ.