ಲಖನೌ : ಉತ್ತರ ಪ್ರದೇಶದ ರಾಜಧಾನಿ ಲಖನೌ ನಗರದ ಅಲೀಗಂಜ್ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ವಿದ್ಯಾರ್ಥಿಗಳು ಸೇರಿದಂತೆ 15 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಮೃತರಲ್ಲಿ ಮೂವರು ಮಹಿಳೆಯರೂ ಸೇರಿದ್ದು, ಹೆಚ್ಚಿನವರು ಕಟ್ಟಡದಲ್ಲಿದ್ದ ಅನಿಮೇಷನ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಕಟ್ಟಡವನ್ನು ಆವರಿಸುತ್ತಿದ್ದಂತೆಯೇ ಹಲವು ವಿದ್ಯಾರ್ಥಿಗಳು ಪ್ರಾಣ ಉಳಿಸಿಕೊಳ್ಳಲು ಮೊದಲ ಮಹಡಿಯಿಂದ ಜಿಗಿದಿದ್ದಾರೆ. ಕೆಲವರು ಕೇಬಲ್ ಹಿಡಿದು ಕೆಳಗಿಳಿಯಲು ಯತ್ನಿಸಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಅಲೀಗಂಜ್‌ನ ಉಷಾ ಮೆಹ್ತಾ ರಸ್ತೆಯಲ್ಲಿರುವ ಕಟ್ಟಡದಲ್ಲಿ ಮಧ್ಯಾಹ್ನ ಸುಮಾರು 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ 19 ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು. ಬೆಂಕಿಯನ್ನು ನಿಯಂತ್ರಣಕ್ಕೆ ತಂದ ಬಳಿಕ ಕಟ್ಟಡದಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ 15 ಮೃತದೇಹಗಳು ಪತ್ತೆಯಾಗಿವೆ.
ಕಟ್ಟಡದ ನೆಲಮಹಡಿಯಲ್ಲಿ ಸಾಕು ಪ್ರಾಣಿಗಳ ಮಾರಾಟ ಮತ್ತು ಚಿಕಿತ್ಸಾ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಬೆಂಕಿಯಲ್ಲಿ ಹಲವು ಬೆಕ್ಕುಗಳು ಹಾಗೂ ಶ್ವಾನಗಳೂ ಸಾವನ್ನಪ್ಪಿವೆ.
ಅಗ್ನಿ ಅವಘಡದ ಮಾಹಿತಿ ದೊರೆಯುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಹಾಗೂ ನಾಗರಿಕ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದವು. ಸ್ಥಳೀಯರು ಕಿಟಕಿಗಳ ಗಾಜು ಒಡೆದು ಒಳಗಿದ್ದ ವಿದ್ಯಾರ್ಥಿಗಳನ್ನು ಹೊರಗೆ ಬರಲು ಸಹಕರಿಸಿದರು.
ಲಖನೌದ ಕಿಂಗ್ ಜಾರ್ಜ್ ಮೆಡಿಕಲ್ ಯೂನಿವರ್ಸಿಟಿಯ ವೈದ್ಯಕೀಯ ಅಧೀಕ್ಷಕ ಡಾ. ಅನಿಲ್ ಅಗರವಾಲ್ ಮಾತನಾಡಿ, “15 ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಟ್ಟಡದಿಂದ ಜಿಗಿದ ಪರಿಣಾಮ ಕೆಲವರಿಗೆ ಬೆನ್ನು ಸೇರಿದಂತೆ ಗಂಭೀರ ಗಾಯಗಳಾಗಿವೆ” ಎಂದು ತಿಳಿಸಿದ್ದಾರೆ.
ಅಗ್ನಿ ಅವಘಡಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಉತ್ತರ ಪ್ರದೇಶ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸಂತಾಪ ಸೂಚಿಸಿ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

