ಉಡುಪಿಯಲ್ಲಿ 28 ವರ್ಷದ ಯುವಕ ಆತ್ಮಹತ್ಯೆ

0
24

ಉಡುಪಿ: ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿ ಬಿಡುಗಡೆಯಾಗಿದ್ದ ಯುವಕನ ಮೇಲೆ ಯುವತಿಯ ಮನೆಯವರು ಹಾಗೂ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆಯ ಬೆನ್ನಲ್ಲೇ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಮೃತ ಯುವಕನನ್ನು ಪೆರ್ಡೂರಿನ ಹಿಂದೂಪರ ಸಂಘಟನೆಯ ಕಾರ್ಯಕರ್ತ ಪ್ರದೀಪ್ ಪೂಜಾರಿ (28) ಎಂದು ಗುರುತಿಸಲಾಗಿದೆ. ಪಾಡಿಗಾರ ಮೂಲದ ಯುವತಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪ್ರದೀಪ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅವರು ಬಳಿಕ ಬಿಡುಗಡೆಯಾಗಿದ್ದರು.

ಇದಾದ ಬಳಿಕ ಯುವತಿಯ ಮನೆಯವರು ಹಾಗೂ ಸಂಬಂಧಿಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರದೀಪ್ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಈ ದೂರಿನ ಸಂಬಂಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಗಾಯಗೊಂಡಿದ್ದ ಪ್ರದೀಪ್ ಚಿಕಿತ್ಸೆಗಾಗಿ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಶುಕ್ರವಾರ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.