
ಉಡುಪಿ: ಮನೆಗೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ 38 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಶಾಪುರ ಗ್ರಾಮದವರಾದ ಸುಮಿತ್ರಾ (38) ಪ್ರಸ್ತುತ ಉಡುಪಿಯಲ್ಲಿ ವಾಸವಾಗಿದ್ದರು. ಕಲ್ಸಂಕದ ಸಮೀಪದ ಮನೆಯೊಂದರಲ್ಲಿ ಮನೆಗೆಲಸ ಮಾಡುತ್ತಿದ್ದ ಅವರು, ನವೆಂಬರ್ 15ರಂದು ಬೆಳಿಗ್ಗೆ ಕೆಲಸಕ್ಕೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದರು. ಆದರೆ ಇದುವರೆಗೂ ಮನೆಗೆ ವಾಪಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಾಪತ್ತೆಯಾದ ಸುಮಿತ್ರಾ ಅವರು ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹಾಗೂ ಗುಂಡು ಮುಖ ಹೊಂದಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ 0820-2520444, ಪೊಲೀಸ್ ನಿಯಂತ್ರಣ ಕೊಠಡಿ 0820-2526444, ಪೊಲೀಸ್ ನಿರೀಕ್ಷಕರು 9480805408 ಅಥವಾ ಪೊಲೀಸ್ ಉಪನಿರೀಕ್ಷಕರು 9080805445 ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
