ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ದಿನದಂದೇ ನಗರದ ಹೆಬ್ಬಾಳದಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಹೆಬ್ಬಾಳದ ಮನೋರಾಯನಪಾಳ್ಯದ ನಿವಾಸಿ ತನುಶ್ರೀ (17) ಮೃತಪಟ್ಟ ದುರ್ದೈವಿ.
ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ತನುಶ್ರೀ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ಹೇಳಲಾಗಿತ್ತು. ಸದ್ಯ ಮೃತದೇಹವನ್ನು ಕೆ.ಜಿ. ಹಳ್ಳಿಯಲ್ಲಿರುವ ಅಂಬೇಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಈ ಪ್ರಕರಣದಲ್ಲಿ ತಾಯಿ ಆಶಾ ಅವರ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಘಟನೆ ನಡೆದು ಸುಮಾರು 8 ಗಂಟೆಗಳ ಕಾಲ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.
ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದ್ದರೂ, ತಾಯಿ ಆಶಾ ರಾತ್ರಿ 10 ಗಂಟೆಯ ನಂತರವಷ್ಟೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬರುವ ಮುನ್ನವೇ 4-5 ಯುವಕರ ಸಹಾಯದಿಂದ ಮೃತದೇಹವನ್ನು ನೇಣಿನಿಂದ ಕೆಳಗಿಳಿಸಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
“ತಾಯಿಯೇ ಮಗಳನ್ನು ಕೊಲೆ ಮಾಡಿ ನಂತರ ನೇಣು ಹಾಕಿದ್ದಾಳೆ” ಎಂದು ತನುಶ್ರೀಯ ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡದೆ ಮೃತದೇಹ ಇಳಿಸಿರುವುದು ಈ ಸಂಶಯವನ್ನು ಬಲಪಡಿಸಿದೆ ಎನ್ನಲಾಗಿದೆ.ಘಟನೆ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

