ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟದ ದೃಶ್ಯ ಹೊಂದಿದ ರೀಲ್ಸ್ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಗ್‌ಬಾಸ್ ಮಾಜಿ ಸ್ಪರ್ಧಿ Rajat Kishan ವಿರುದ್ಧ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.
ಕನಕಪುರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಸುರಕ್ಷತೆಗೆ ಧಕ್ಕೆಯಾಗುವಂತಹ ವಿಡಿಯೋ ಹಂಚಿಕೊಂಡಿರುವ ಆರೋಪ ಕೇಳಿಬಂದಿದೆ. ರಜತ್ ಅವರು ಬೈಕ್‌ನಲ್ಲಿ ಸ್ಟೈಲಾಗಿ ಬರುತ್ತಿರುವಾಗ, ಅವರ ಹಿಂದೆ ಪೆಟ್ರೋಲ್ ಬಾಂಬ್ ಮಾದರಿಯ ವಸ್ತು ಸ್ಫೋಟವಾಗುವ ದೃಶ್ಯವನ್ನು ರೀಲ್ಸ್ ರೂಪದಲ್ಲಿ ಪ್ರಕಟಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸಾರ್ವಜನಿಕರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು.
ವಿವಾದ ಹೆಚ್ಚುತ್ತಿದ್ದಂತೆ ರಜತ್ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದರು. ಆದಾಗ್ಯೂ, ಘಟನೆಯ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೊಟೊ) ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಡಿವೈಎಸ್‌ಪಿ ಶ್ರೀನಿವಾಸ್ ಮಾಧ್ಯಮಕ್ಕೆ ಮಾಹಿತಿ ನೀಡುತ್ತಾ, ಸಾರ್ವಜನಿಕ ಶಾಂತಿ ಭಂಗ, ಅಪಾಯಕಾರಿ ವರ್ತನೆ, ರಸ್ತೆ ನಿಯಮ ಉಲ್ಲಂಘನೆ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಭಾರತ ನ್ಯಾಯ ಸಂಹಿತೆಯ (BNS) ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಿದ್ದು, ರಜತ್ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

