ಬೆಂಗಳೂರು : ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮಹತ್ವದ ಮಳೆ ಮುನ್ಸೂಚನೆ ನೀಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಹಾಗೂ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮೇ 9 ಮತ್ತು 10ರಂದು ಮಳೆಯ ಅಬ್ಬರ ಹೆಚ್ಚಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ವಿಶೇಷವಾಗಿ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ವಾಹನ ಸವಾರರು ಜಾಗರೂಕರಾಗಿರಬೇಕು ಎಂದು ತಿಳಿಸಲಾಗಿದೆ.
ಇನ್ನೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಗೂ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಶುಷ್ಕ ವಾತಾವರಣ ಮುಂದುವರಿಯಲಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರಿನ ಜೊತೆಗೆ ಮೈಸೂರು, ಬಳ್ಳಾರಿ, ಹಾಸನ, ಚಾಮರಾಜನಗರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯ ಸಿಂಚನವಾಗಲಿದೆ.

