ಬೆಂಗಳೂರು : ರಾಜ್ಯದಲ್ಲಿ ತೀವ್ರ ಬೇಸಿಗೆ ಬಿಸಿಲಿನಿಂದ ಬಳಲುತ್ತಿರುವ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಮೇ 15ರಿಂದ ಹಿಂದೂ ಮಹಾಸಾಗರ ಹಾಗೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆ ವೇಗ ಪಡೆಯುವ ಸಾಧ್ಯತೆ ಇದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ನಿರ್ಮಾಣವಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿದಂತೆ ಸುಮಾರು 15 ಜಿಲ್ಲೆಗಳಲ್ಲಿ ಮಳೆ ಸಿಂಚನವಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮೇ 11ರಿಂದ 13ರವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮೇ 14ರಂದು 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಭಾಗಗಳಲ್ಲಿ ತಡರಾತ್ರಿ ಹಾಗೂ ಮುಂಜಾನೆ ವೇಳೆ ಮಳೆಯಾಗುವ ಸಾಧ್ಯತೆ ಇದ್ದು, ಮೇ 11 ಮತ್ತು 12ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಭಾಗಗಳಾದ ಕೊಡಗು, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ತುಮಕೂರು ಭಾಗಗಳಲ್ಲಿ ಮೇ 14ರಿಂದ ಹವಾಮಾನದಲ್ಲಿ ಬದಲಾವಣೆ ಕಂಡುಬಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದೇ ವೇಳೆ ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಹವಾಮಾನದಲ್ಲಿ ಬದಲಾವಣೆ ಉಂಟಾಗಲಿದ್ದು, ಇದು ಮುಂಗಾರು ಮಾರುತಗಳ ಚಲನೆಗೆ ಸಹಕಾರಿಯಾಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ.

