ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

0
32

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನದ ಸುದ್ದಿ ಕಿರುತೆರೆ ಮತ್ತು ಸಿನಿರಂಗದಲ್ಲಿ ಭಾರೀ ದುಃಖದ ವಾತಾವರಣ ಮೂಡಿಸಿದೆ.

ಇಂದು ಮುಂಜಾನೆ ದಿಲೀಪ್ ರಾಜ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

1978ರ ಸೆಪ್ಟೆಂಬರ್ 2ರಂದು ಬೆಂಗಳೂರಿನಲ್ಲಿ ಜನಿಸಿದ್ದ ದಿಲೀಪ್ ರಾಜ್, ಕಿರುತೆರೆಯ “ಕಂಬದ ಮನೆ” ಧಾರಾವಾಹಿಯ ಮೂಲಕ ಅಭಿನಯ ಲೋಕಕ್ಕೆ ಕಾಲಿಟ್ಟಿದ್ದರು. ನಂತರ ಹಲವು ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದರು.

ವಿಶೇಷವಾಗಿ ಮಿಲನ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅವರಿಗೆ ಎದುರಾಳಿ ಖಳನಾಯಕನ ಪಾತ್ರದಲ್ಲಿ ಅಭಿನಯಿಸಿ ಅಪಾರ ಜನಪ್ರಿಯತೆ ಪಡೆದಿದ್ದರು. ಅದಲ್ಲದೇ, ತಾವು ನಿರ್ಮಿಸಿ ನಟಿಸಿದ್ದ ಹಿಟ್ಲರ್ ಕಲ್ಯಾಣ ಧಾರಾವಾಹಿಯ ಮೂಲಕ ಮನೆಮಾತಾಗಿದ್ದರು.

ದಿಲೀಪ್ ರಾಜ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಹಾಗೂ ಕಿರುತೆರೆ ಕಲಾವಿದರು ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆ ಕನ್ನಡ ಮನರಂಜನಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವೆಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here