ಮಂಗಳೂರು: ಚೆನ್ನೈನಿಂದ ರೈಲಿನ ಮೂಲಕ ಮಂಗಳೂರಿಗೆ ಭಾರಿ ಪ್ರಮಾಣದ ನಿಷೇಧಿತ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಮಂಗಳೂರು ಪೊಲೀಸರು ಯಶಸ್ವಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಸುಹಾನ (21) ಎಂದು ಗುರುತಿಸಲಾಗಿದೆ. ಈಕೆ ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ BCA ವಿದ್ಯಾರ್ಥಿನಿಯಾಗಿದ್ದಾಳೆ.
ಮಂಗಳವಾರ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈಕೆಯನ್ನು ಬಂಧಿಸಿದ್ದಾರೆ.
ಬಂಧಿತ ವಿದ್ಯಾರ್ಥಿನಿಯಿಂದ ಸುಮಾರು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋ ಗಾಂಜಾ ಎಂಬ ಅತೀ ದುಬಾರಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಹಾಗೂ ಇತರ ದಾಖಲೆಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಪ್ರಾಥಮಿಕ ತನಿಖೆ ಪ್ರಕಾರ, ಸುಹಾನ ಚೆನ್ನೈನಿಂದ ಮಂಗಳೂರಿಗೆ ಈ ಮಾದಕ ವಸ್ತುವನ್ನು ಸಾಗಿಸಿಕೊಂಡು ಬಂದಿದ್ದು, ಕಾಲೇಜು ವಿದ್ಯಾರ್ಥಿಗಳು ಹಾಗೂ ಶ್ರೀಮಂತ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶ ಹೊಂದಿದ್ದಳು ಎನ್ನಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಕೇವಲ 21 ವರ್ಷದ ಈ ವಿದ್ಯಾರ್ಥಿನಿ ಈಗಾಗಲೇ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈಕೆಯ ವಿರುದ್ಧ ಈ ಹಿಂದೆ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಇತ್ತೀಚಿನ ದಿನಗಳಲ್ಲಿ ಮಂಗಳೂರು ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಮಾದಕ ವಸ್ತು ಜಾಲಗಳು ಹೆಚ್ಚುತ್ತಿರುವ ಹಿನ್ನೆಲೆ, ಪೊಲೀಸರು ನಿಗಾ ಹಾಗೂ ಜಾಗೃತಿ ಕಾರ್ಯಗಳನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

