ರಾಜ್ಯದಲ್ಲಿಂದು ಆಲಿಕಲ್ಲು ಮಳೆಯ ಅಬ್ಬರ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ..!

0
51

ಬೆಂಗಳೂರು, ಮೇ 18: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ, ಗುಡುಗು-ಸಿಡಿಲು ಹಾಗೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಉತ್ತರ ಹಾಗೂ ದಕ್ಷಿಣ ಒಳನಾಡಿನ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಆರೆಂಜ್ ಅಲರ್ಟ್ ಘೋಷಿತ ಜಿಲ್ಲೆಗಳು

ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಜೊತೆಗೆ ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಭಾರಿ ಮಳೆಯೊಂದಿಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಸಾಧಾರಣ ಮಳೆ?

ರಾಯಚೂರು, ಯಾದಗಿರಿ, ವಿಜಯಾಪುರ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಕರಾವಳಿ ತೀರದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೇ 19ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಸಾರ್ವಜನಿಕರಿಗೆ ಎಚ್ಚರಿಕೆ

ಸಿಡಿಲು, ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯ ಸಂದರ್ಭ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ರೈತರು ಹಾಗೂ ಜಾನುವಾರು ಸಾಕಣೆದಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮುಂದಿನ ಐದು ದಿನಗಳ ಕಾಲ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here