ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ದಿನೇದಿನೇ ಚುರುಕುಗೊಳ್ಳುತ್ತಿದ್ದು, ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ, ಗುಡುಗು-ಮಿಂಚು ಹಾಗೂ ಬಲವಾದ ಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡಿಗೆ ‘ಆರೆಂಜ್ ಅಲರ್ಟ್’
ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರಿ ಮಳೆ ಹಾಗೂ ಆಲಿಕಲ್ಲು ಬೀಳುವ ಮುನ್ಸೂಚನೆ ಹಿನ್ನೆಲೆ ಈ ಭಾಗಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮಲೆನಾಡು ಮತ್ತು ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಬೆಂಗಳೂರು ಸೇರಿ ಹಲವೆಡೆ ‘ಯೆಲ್ಲೋ ಅಲರ್ಟ್’
ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಜಾರಿಗೊಳಿಸಲಾಗಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಮಳೆ ಸದ್ದು
ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲೂ ವಾತಾವರಣದಲ್ಲಿ ಏರುಪೇರಾಗಿದ್ದು, ಬೆಳಗಾವಿ, ಧಾರವಾಡ, ಗದಗ ಮತ್ತು ಕಲಬುರಗಿ ಭಾಗಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯ ಪ್ರಭಾವ ಮುಂದುವರಿದಿದೆ.
ಭಾರಿ ಗಾಳಿ ಮತ್ತು ಆಲಿಕಲ್ಲು ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮಳೆ ವೇಳೆ ಮರಗಳ ಕೆಳಗೆ ಅಥವಾ ಹಳೆಯ ಕಟ್ಟಡಗಳ ಬಳಿ ಆಶ್ರಯ ಪಡೆಯಬಾರದು ಎಂದು ಸೂಚಿಸಲಾಗಿದೆ. ರೈತರು ತಮ್ಮ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರಿಸಬೇಕು ಹಾಗೂ ಕಟಾವಿಗೆ ಬಂದಿರುವ ಬೆಳೆಗಳನ್ನು ಸಂರಕ್ಷಿಸಿಕೊಳ್ಳುವಂತೆ ಹವಾಮಾನ ತಜ್ಞರು ಸಲಹೆ ನೀಡಿದ್ದಾರೆ.

