E-KYC ಕಡ್ಡಾಯ; ಮಾಡಿಸದಿದ್ದರೆ ಉದ್ಯೋಗ ಚೀಟಿ ರದ್ದು..!
ಮೂಡುಬಿದಿರೆ : ತಾಲೂಕಿನ 12 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಫಲಾನುಭವಿಗಳಿಗಾಗಿ ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಲಾಗುತ್ತಿದೆ. ಮುಂದಿನ ವಾರದಿಂದ ನಡೆಯಲಿರುವ ಈ ಸಭೆಗಳಲ್ಲಿ ಉದ್ಯೋಗ ಚೀಟಿ ಹೊಂದಿರುವ ಕುಟುಂಬದ ಸದಸ್ಯರು ಕಡ್ಡಾಯವಾಗಿ ಭಾಗವಹಿಸಿ E-KYC ದೃಢೀಕರಣ ಮಾಡಿಸಿಕೊಳ್ಳಬೇಕೆಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದ್ದಾರೆ.
ಸರ್ಕಾರದ ಇತ್ತೀಚಿನ ಆದೇಶದಂತೆ, E-KYC ಪ್ರಕ್ರಿಯೆ ಪೂರ್ಣಗೊಳಿಸದ ಫಲಾನುಭವಿಗಳಿಗೆ ನರೇಗಾ ಯೋಜನೆಯಡಿ ದೊರೆಯುವ ಯಾವುದೇ ಸೌಲಭ್ಯಗಳು ಲಭ್ಯವಾಗುವುದಿಲ್ಲ ಎಂದು ತಿಳಿಸಲಾಗಿದೆ. ಅಲ್ಲದೆ, ನಿಗದಿತ ಅವಧಿಯಲ್ಲಿ E-KYC ಮಾಡಿಸದಿದ್ದರೆ ಉದ್ಯೋಗ ಚೀಟಿಗಳು ರದ್ದಾಗಲಿದ್ದು, ನಂತರ ಅವುಗಳನ್ನು ಮರುಸ್ಥಾಪಿಸಲು ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಉದ್ಯೋಗ ಚೀಟಿ ಹೊಂದಿರುವ ಎಲ್ಲಾ ಫಲಾನುಭವಿಗಳು ತಮ್ಮ ಗ್ರಾಮ ಪಂಚಾಯತ್‌ಗಳಲ್ಲಿ ನಿಗದಿಪಡಿಸಿದ ದಿನಾಂಕದಂದು ತಪ್ಪದೇ ಹಾಜರಾಗಿ E-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಮನವಿ ಮಾಡಲಾಗಿದೆ.
ಗ್ರಾಮ ಪಂಚಾಯತ್ ಮಟ್ಟದಲ್ಲಿ ನಡೆಯುವ ಈ ವಿಶೇಷ ಗ್ರಾಮಸಭೆಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವ ಜೊತೆಗೆ ಸ್ಥಳದಲ್ಲೇ E-KYC ಪ್ರಕ್ರಿಯೆ ನಡೆಸುವ ವ್ಯವಸ್ಥೆಯೂ ಮಾಡಲಾಗಿದೆ ಎಂದು ತಿಳಿದುಬಂದಿದೆ.

