ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಸಂಬಂಧ ಬಾಕಿ ಉಳಿದಿರುವ ಮಾಸಿಕ ಕಂತುಗಳ ಹಣ ಬಿಡುಗಡೆ ವಿಚಾರ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ಕಮಲಾನಗರ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಮತ್ತು ನ್ಯಾಯಮೂರ್ತಿ ಕೆ. ಮನ್ಮಧರಾವ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿದೆ.
ಅರ್ಜಿಯಲ್ಲಿ ಏನಿದೆ?
ಅರ್ಜಿದಾರರ ಪ್ರಕಾರ, 2024-25ನೇ ಆರ್ಥಿಕ ವರ್ಷದ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಕಂತುಗಳು ಇನ್ನೂ ಅನೇಕ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಆಡಳಿತಾತ್ಮಕ ವರ್ಗಾವಣೆ ಮತ್ತು ತಾಂತ್ರಿಕ ಅಡಚಣೆಗಳಿಂದ ಸುಮಾರು ₹5,000 ಕೋಟಿ ಸಾರ್ವಜನಿಕ ಹಣ ಲ್ಯಾಪ್ಸ್ ಆಗಿರುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈಗಾಗಲೇ ಕಂತು ವಿಳಂಬ ಮತ್ತು ತಾಂತ್ರಿಕ ಸಮಸ್ಯೆಗಳ ಬಗ್ಗೆ ಸ್ಪಷ್ಟನೆ ನೀಡಿರುವ ಹಿನ್ನೆಲೆ, ಬಾಕಿ ಇರುವ ಎರಡು ತಿಂಗಳ ಹಣವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.
ಹಣಕಾಸು ಹಾಗೂ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಗೆ ನೋಟಿಸ್
ಅರ್ಜಿಯ ವಿಚಾರಣೆ ಬಳಿಕ ರಾಜ್ಯ ಹಣಕಾಸು ಇಲಾಖೆ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ವಾದ ಮಂಡಿಸಿದರು.
‘4 ದಿನಗಳಲ್ಲಿ ಮಾರ್ಚ್ ಕಂತು ಬಿಡುಗಡೆ’
ಈ ಕುರಿತು ಕೆಲ ದಿನಗಳ ಹಿಂದೆ ಪ್ರತಿಕ್ರಿಯಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾರ್ಚ್ ತಿಂಗಳ ಬಾಕಿ ಕಂತು ಮುಂದಿನ ನಾಲ್ಕು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ತಿಳಿಸಿದ್ದರು. ಜೊತೆಗೆ ಏಪ್ರಿಲ್ ತಿಂಗಳ ಕಂತು ಸಹ ಮುಂದಿನ 8 ರಿಂದ 10 ದಿನಗಳೊಳಗೆ ಬಿಡುಗಡೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
‘ಹಣಕಾಸಿನ ಕೊರತೆ ಕಾರಣವಲ್ಲ’
ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಳಂಬಕ್ಕೆ ಹಣಕಾಸಿನ ಕೊರತೆ ಕಾರಣವಲ್ಲ. ತಾಂತ್ರಿಕ ಅಡಚಣೆಗಳು ಹಾಗೂ ಚುನಾವಣಾ ಪ್ರಕ್ರಿಯೆಗಳ ನಡುವಿನ ಆಡಳಿತಾತ್ಮಕ ಬದಲಾವಣೆಗಳಿಂದ ವಿಳಂಬ ಉಂಟಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

