ಕರ್ನಾಟಕದ ಉತ್ತರಕನ್ನಡ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ತಲೆತಗ್ಗಿಸುವಂತಹ ಅಮಾನುಷ ಘಟನೆ ಬೆಳಕಿಗೆ ಬಂದಿದ್ದು, ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ 13 ವರ್ಷದ ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಪ್ರಕರಣ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ ಎನ್ನಲಾಗಿದ್ದು, ಘಟನೆ ನಡೆದ ದಿನ ತೀವ್ರ ಮದ್ಯದ ಅಮಲಿನಲ್ಲಿ ತನ್ನ ಹೆತ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಕೃತ ಕೃತ್ಯದಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯಿಂದ ಮಾನಸಿಕವಾಗಿ ನೊಂದ ಬಾಲಕಿ ಧೈರ್ಯ ಮಾಡಿ ಪಕ್ಕದ ಮನೆಯವರ ಬಳಿ ನಡೆದ ದೌರ್ಜನ್ಯವನ್ನು ಅತ್ತುಕರೆದು ವಿವರಿಸಿದ್ದಾಳೆ. ವಿಷಯ ತಿಳಿದ ನೆರೆಹೊರೆಯವರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ದೂರು ಸ್ವೀಕರಿಸಿದ ಅಂಕೋಲಾ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿ ಅಪ್ರಾಪ್ತೆಯಾಗಿರುವುದರಿಂದ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸದ್ಯ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಘಟನೆ ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

