ಹಾವಂಜೆ : ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಲಗಿರಿ ನಾಲ್ಕನೇ ವಾರ್ಡಿನಲ್ಲಿ ಕಸದ ರಾಶಿ ತುಂಬಿ ತುಳುಕುತ್ತಿದ್ದು, ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಹಾವಂಜೆ-ಆರೂರು ಕೊಳಲಗಿರಿ ರಸ್ತೆಯ ಎರಡೂ ಬದಿಗಳ ಚರಂಡಿಗಳಲ್ಲಿ ಕಸ ತುಂಬಿಕೊಂಡಿದ್ದು, ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಈ ಕಸಗಳು ನದಿಗೆ ಸೇರುವ ಅಪಾಯ ಎದುರಾಗಿದೆ. ಜೊತೆಗೆ ಮಳೆಯ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವ ಸಾಧ್ಯತೆ ಇದ್ದು, ಮಲೇರಿಯಾ ಸೇರಿದಂತೆ ಮಾರಕ ಕಾಯಿಲೆಗಳ ಭೀತಿ ಉಂಟಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಪ್ರದೇಶದಲ್ಲಿ ಸಾವಿರಾರು ಬಡವರ್ಗದ ಕುಟುಂಬಗಳು ವಾಸಿಸುತ್ತಿದ್ದು, ಕಸದ ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟದಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎನ್ನಲಾಗಿದೆ.
ಗುಜರಿ ವ್ಯಾಪಾರಸ್ಥರ ಕಸದ ರಾಶಿಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಸಮೀಪದಲ್ಲಿರುವ ಕೆತ್ತೋಲಕ್ ಚರ್ಚ್ಗೆ ಬರುವ ಭಕ್ತಾಧಿಗಳಿಗೆ ತೊಂದರೆ ಉಂಟಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಈ ಕುರಿತು ತುಳುನಾಡ ರಕ್ಷಣೆ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ ನಡುಮನೆ ಮಾತನಾಡಿ, “ಕೂಡಲೇ ಕಸ ತೆರವು ಮಾಡಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆ ನಿರೋಧಕ ಔಷಧ ಸಿಂಪಡಿಸಿ ಪರಿಸರ ಶುಚಿಗೊಳಿಸಬೇಕು. ಇಲ್ಲವಾದಲ್ಲಿ ಸಾರ್ವಜನಿಕರೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
ಸ್ಥಳೀಯ ನಾಗರಿಕರು ಕೂಡ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಿದ್ದಾರೆ.

