ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹನ ಪ್ರಕರಣ : ಶಾಸಕ ಯಶ್‌ಪಾಲ್ ಸುವರ್ಣ ಮೇಲಿನ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್..!

0
47

ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹನ ಹಾಗೂ ಕಾನೂನುಬಾಹಿರ ಪ್ರತಿಭಟನೆ ನಡೆಸಿದ ಆರೋಪ ಎದುರಿಸುತ್ತಿದ್ದ ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿದಂತೆ ಇತರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಆರೋಪಿಗಳ ವಿರುದ್ಧ ಯಾವುದೇ ನೇರ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ಈ ಆದೇಶ ನೀಡಿದೆ.

ಕುಂದಾಪುರ ಶಾಲೆಯೊಂದರ ಪ್ರಾಂಶುಪಾಲರಿಗೆ ರಾಜ್ಯ ಪ್ರಶಸ್ತಿ ತಡೆಹಿಡಿದಿರುವುದನ್ನು ವಿರೋಧಿಸಿ 2024ರ ಸೆಪ್ಟೆಂಬರ್ 6ರಂದು ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಂದಿನ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಯನ್ನು ದಹಿಸಲಾಗಿತ್ತು ಎಂದು ಎನ್‌ಎಸ್‌ಯುಐ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ಶಾಸಕ ಯಶ್‌ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, “ಅರ್ಜಿದಾರರ ವಿರುದ್ಧ ಯಾವುದೇ ಪ್ರಾಥಮಿಕ ಸಾಕ್ಷ್ಯಾಧಾರಗಳಿಲ್ಲದೆ ತನಿಖೆಗೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟು, ಹರಿಯಾಣ ಸರ್ಕಾರ ಮತ್ತು ಭಜನ್ ಲಾಲ್ ಪ್ರಕರಣದ ತೀರ್ಪನ್ನು ಉಲ್ಲೇಖಿಸಿ ಎಫ್‌ಐಆರ್ ರದ್ದುಪಡಿಸಿದರು.

ಪ್ರಾಸಿಕ್ಯೂಷನ್ ದಾಖಲೆಗಳ ಪ್ರಕಾರ, ಪ್ರಶಸ್ತಿ ತಡೆಹಿಡಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಸೇರಿ ಪ್ರತಿಭಟನೆ ನಡೆಸಿದ್ದಾರೆಯೇ ಹೊರತು, ಪ್ರತಿಕೃತಿ ದಹನಕ್ಕೂ ಶಾಸಕರು ಹಾಗೂ ಇತರ ಅರ್ಜಿದಾರರಿಗೂ ನೇರ ಸಂಬಂಧವಿರುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಅರ್ಜಿದಾರರ ಪರವಾಗಿ ವಕೀಲ ನಿಶಿತ್ ಕುಮಾರ್ ಶೆಟ್ಟಿ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here