ಭಟ್ಕಳ : ತಾಲೂಕಿನ ಬೆಳಕೆ ಗ್ರಾಮದ ಕಂಚಿಕೇರಿಯ 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಒಂದು ದಿನದ ಬಳಿಕ ಮನೆಯ ಸಮೀಪದ ಬಾವಿಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ವಿದ್ಯಾರ್ಥಿನಿಯನ್ನು ಗಾಯತ್ರಿ ನಾಗರಾಜ ನಾಯ್ಕ (19) ಎಂದು ಗುರುತಿಸಲಾಗಿದೆ. ಅವರು ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ (Bachelor of Computer Applications) ವ್ಯಾಸಂಗ ಮಾಡುತ್ತಿದ್ದರು.
ಕುಟುಂಬದವರ ಮಾಹಿತಿ ಪ್ರಕಾರ, ಗಾಯತ್ರಿ ಗುರುವಾರದಿಂದ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು ಹಾಗೂ ಸ್ಥಳೀಯರು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು.
ಶುಕ್ರವಾರ ಮಧ್ಯಾಹ್ನ ಸುಮಾರು 2.30ರ ವೇಳೆಗೆ ಅವರ ಮನೆಯ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತಿ ಪರಿಶೀಲನೆ ನಡೆಸಿದರು.
ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದ್ದರೂ, ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆ ಹಾಗೂ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿನಿಯ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

