ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಮಾಡಿ ಬಂಕೇರಕಟ್ಟ ನೂತನ ಸೇತುವೆ ಹಾಗೂ ಪೆರಂಪಳ್ಳಿ ರೈಲ್ವೇ ಮೇಲ್ಸೇತುವೆ ಅಗಲೀಕರಣ ಕಾಮಗಾರಿಗೆ ಸುಮಾರು 15 ಕೋಟಿ ಅನುದಾನ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಅಂಬಾಗಿಲು–ಮಣಿಪಾಲ ರಸ್ತೆಯ ವಾಹನ ದಟ್ಟಣೆಯಿಂದ ಕೂಡಿದ್ದು, ರಸ್ತೆಯು ಚತುಷ್ಪಥವಾದ ನಂತರ ಪೆರಂಪಳ್ಳಿ ರೈಲ್ವೇ ಮೇಲ್ಸೇತುವೆಯಲ್ಲಿ ವಾಹನ ಸವಾರರಿಗೆ ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅಗಲೀಕರಣ ಅತೀ ಅವಶ್ಯಕವಾಗಿತ್ತು.
ಕಲ್ಮಾಡಿ ಬಂಕೇರಕಟ್ಟ ಸೇತುವೆಯೂ ಹಳೆಯದಾಗಿದ್ದು ಪ್ರತಿ ವರ್ಷ ಮಳೆಗಾಲದಲ್ಲಿ ಕೃತಕ ನೆರೆ ಹಾಗೂ ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿತ್ತು.
ಕಳೆದ ಬಾರಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾನ್ಯ ಸಚಿವರಿಗೂ ಮನವಿ ಸಲ್ಲಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ಸಲ್ಲಿಸಿದ ಪ್ರಸ್ತಾವನೆಗೆ ಪೆರಂಪಳ್ಳಿ ರೈಲ್ವೇ ಮೇಲ್ಸೇತುವೆ ಅಗಲೀಕರಣಕ್ಕೆ ರೂ. 9.95 ಕೋಟಿ ಹಾಗೂ ಕಲ್ಮಾಡಿ ಬಂಕೇರಕಟ್ಟದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ರೂ. 5.00 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆಯ ಮೂಲಕ ಮಂಜೂರುಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ.
ಅನುದಾನ ಬಿಡುಗಡೆಗೆ ವಿಶೇಷ ಸಹಕಾರ ನೀಡಿದ ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ವಿಶೇಷ ಧನ್ಯವಾದ ಸಲ್ಲಿವುದಾಗಿ ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
