ಅಕ್ರಮ ಸಂಬಂಧದ ಅಂತ್ಯ ರಕ್ತಪಾತದಲ್ಲಿ ಕೊನೆ – ಪ್ರಿಯಕರನನ್ನು ಚಟ್ಟಕಟ್ಟಿದ ಪತಿರಾಯ..!

0
180

ಬೆಳಗಾವಿ : ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

ಮೃತನನ್ನು ಬಾಬು ಭೂಸಗೋಳ (35) ಎಂದು ಗುರುತಿಸಲಾಗಿದೆ. ಆರೋಪಿಗಳು ಬಾಬು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ತಲೆಗೆ ಕಲ್ಲಿನಿಂದ ಜಜ್ಜಿ ಹಾಗೂ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ಬಾಬು ಭೂಸಗೋಳ ಅವರು ಆರೋಪಿಯ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇದೇ ವಿಚಾರದಿಂದ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಇದರ ಜೊತೆಗೆ ರಸ್ತೆ ಅತಿಕ್ರಮಣ ಮತ್ತು ಸಾರ್ವಜನಿಕ ರಸ್ತೆ ಬಂದ್ ಮಾಡಿದ್ದ ವಿಚಾರವೂ ವಿವಾದಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಆರೋಪಿಯು ತನ್ನ ಸ್ನೇಹಿತನೊಂದಿಗೆ ಸೇರಿ ಬಾಬು ಅವರನ್ನು ಕೊಲೆ ಮಾಡಲು ಸಂಚು ರೂಪಿಸಿ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆ ಸಂಕೇಶ್ವರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಈ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಯ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here