ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತ ಬಾಲಕರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಮಾಹಿತಿ ಪ್ರಕಾರ, ದೂರುದಾರರ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ವಿಷಯ ಇತ್ತೀಚೆಗೆ ಪೋಷಕರ ಗಮನಕ್ಕೆ ಬಂದಿದೆ. ಬಳಿಕ ಬಾಲಕಿಯನ್ನು ಪ್ರೀತಿಯಿಂದ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಪ್ರಕಾರ, ಈ ಘಟನೆ 2023ರಲ್ಲಿ ನಡೆದಿದ್ದು, ದೂರುದಾರರ ಸಂಬಂಧಿಕನಾಗಿರುವ ಒಬ್ಬ ಅಪ್ರಾಪ್ತ ಬಾಲಕ ಹಾಗೂ ಆತನ ಸ್ನೇಹಿತ ಬಾಲಕಿಯನ್ನು ಬೆಳ್ತಂಗಡಿ ಸಮೀಪದ ಡ್ಯಾಂ ಪ್ರದೇಶದ ಕಟ್ಟಡವೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ.
ಇದಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದರೆಂಬ ಆರೋಪವೂ ಕೇಳಿಬಂದಿದೆ. ಈ ಕಾರಣದಿಂದ ಬಾಲಕಿ ಘಟನೆ ಕುರಿತು ಬಹಿರಂಗಪಡಿಸಲು ಹೆದರಿದ್ದಳು ಎನ್ನಲಾಗಿದೆ.
ಜೂನ್ 23, 2026ರಂದು ನೀಡಲಾದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ವಿಧಿಗಳು ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಎಲ್ಲಾ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪ್ರಾಪ್ತರ ಹೆಸರು ಮತ್ತು ಇತರೆ ಗುರುತು ವಿವರಗಳನ್ನು ಕಾನೂನುಬದ್ಧ ಕಾರಣಗಳಿಂದ ಬಹಿರಂಗಪಡಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

