ಮಂಡ್ಯ : ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಯಲ್ಲಿ ಹೃದಯವಿದ್ರಾವಕ ದುರಂತ ಸಂಭವಿಸಿದ್ದು, ಫೋಟೋ ತೆಗೆಯುವ ವೇಳೆ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಮಂಗಳವಾರ ಸಂಜೆ ಕುಟುಂಬದ ಸದಸ್ಯರು ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ನದಿಯ ತಟದಲ್ಲಿ ಫೋಟೋ ತೆಗೆಯುತ್ತಿದ್ದಾಗ ನೀರಿನ ರಭಸಕ್ಕೆ ಸಿಲುಕಿ ಒಬ್ಬರ ನಂತರ ಒಬ್ಬರು ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಶ್ವೇತಾ (28), ಚೈತ್ರ (20), ಪ್ರಿಯಾಂಕಾ (28), ವಿಜಯಮ್ಮ (50) ಹಾಗೂ ಮಹೇಶ್ ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದರೂ, ಐವರನ್ನೂ ಜೀವಂತವಾಗಿ ರಕ್ಷಿಸಲು ಸಾಧ್ಯವಾಗಲಿಲ್ಲ. ಮೃತದೇಹಗಳನ್ನು ಹೊರತೆಗೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಒಂದೇ ಕುಟುಂಬದ ಸದಸ್ಯರು ಪ್ರವಾಸದ ನೆನಪಿಗಾಗಿ ಫೋಟೋ ತೆಗೆಯಲು ನದಿಯ ಸಮೀಪ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರಲ್ಲಿ ತೀವ್ರ ಶೋಕ ಮತ್ತು ಆಘಾತ ಉಂಟಾಗಿದೆ. ಮಳೆಯ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

