ರಾಜ್ಯಾದ್ಯಂತ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

0
53

ಮಂಗಳೂರು : ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಜುಲೈ 2ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಜೂನ್ 30ರಂದು ವಿಶೇಷವಾಗಿ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ, ಮಲೆನಾಡು ಹಾಗೂ ನದಿ ತೀರದ ಪ್ರದೇಶಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಅನಗತ್ಯ ಪ್ರಯಾಣವನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here