ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಆಟೋ ಸ್ಟ್ಯಾಂಡ್ ಸಮೀಪ, ಕ್ಲಾಸಿಕ್ ಬಿಲ್ಡಿಂಗ್ ಎದುರು ರಾಷ್ಟ್ರೀಯ ಹೆದ್ದಾರಿ-66ರ ಸರ್ವಿಸ್ ರಸ್ತೆಗೆ ಹೊಂದಿಕೊಂಡಿರುವ ಬೃಹತ್ ಒಣಗಿದ ಮರ ಸಾರ್ವಜನಿಕರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದ್ದು, ಕೂಡಲೇ ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹಲವು ತಿಂಗಳುಗಳಿಂದ ಈ ಮರ ಒಣಗಿದ ಸ್ಥಿತಿಯಲ್ಲೇ ನಿಂತಿದ್ದು, ಯಾವುದೇ ಕ್ಷಣದಲ್ಲಿ ಗಾಳಿ ಅಥವಾ ಮಳೆಗೆ ರಸ್ತೆಯ ಮೇಲೆ ಉರುಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ಸಾವಿರಾರು ದ್ವಿಚಕ್ರ ವಾಹನ ಸವಾರರು, ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಸಾರ್ವಜನಿಕರು ಸಂಚರಿಸುತ್ತಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೂ ಇದೇ ರಸ್ತೆಯನ್ನು ಬಳಸುತ್ತಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಒಣಗಿದ ಮರಗಳು ಹಾಗೂ ಕೊಂಬೆಗಳು ಉರುಳಿ ಹಲವರು ಗಾಯಗೊಂಡಿರುವುದು, ಕೆಲವರು ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಈ ಮರವೂ ಅಪಾಯದ ಮುನ್ಸೂಚನೆಯಾಗಿ ಪರಿಣಮಿಸಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ನಗರಸಭೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ, ಸಾರ್ವಜನಿಕರು ಮತ್ತು ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಈ ಅಪಾಯಕಾರಿ ಒಣಗಿದ ಮರವನ್ನು ಕೂಡಲೇ ತೆರವುಗೊಳಿಸಿ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಬೇಕೆಂದು ಆಗ್ರಹಿಸಿದ್ದಾರೆ.
ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುವ ಮುನ್ನ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತು ತುರ್ತು ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

