ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರಿದಿದ್ದು, ಇಂದು (ಜೂನ್ 30) ಕೂಡ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗಗಳಲ್ಲಿ ಕೆಲವೆಡೆ ಭಾರೀ ಹಾಗೂ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕಳೆದ ಮೂರು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆ ಸಂಪರ್ಕಕ್ಕೂ ತೊಂದರೆ ಉಂಟಾಗಿದೆ. ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೂ ಮಳೆ ನೀರು ನುಗ್ಗಿದ ಘಟನೆ ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 2ರವರೆಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ ತೀರ, ಸಮುದ್ರ ತೀರ ಹಾಗೂ ಅಪಾಯದ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮನವಿ ಮಾಡಿದ್ದಾರೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 40–50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ನಿವಾಸಿಗಳು, ಮೀನುಗಾರರು ಹಾಗೂ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಅಧಿಕೃತ ಹವಾಮಾನ ಮಾಹಿತಿ ಮತ್ತು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿ ಸುರಕ್ಷಿತವಾಗಿರುವಂತೆ ಮನವಿ ಮಾಡಲಾಗಿದೆ.

