ಕರಾವಳಿಯಲ್ಲಿ ವರುಣನ ಅಬ್ಬರ : ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್

0
31

ಮಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ಭಾರೀ ಮಳೆಯ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಘಟ್ಟ ಪ್ರದೇಶಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಭೂಕುಸಿತ ಹಾಗೂ ಮರಗಳು ಉರುಳುವ ಸಾಧ್ಯತೆ ಹಿನ್ನೆಲೆಯಲ್ಲಿ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಪ್ರದೇಶದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ನಿಷೇಧ ಹೇರಲಾಗಿದೆ. ನದಿ ತೀರ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸ್ಥಳೀಯ ಆಡಳಿತ ಮನವಿ ಮಾಡಿದೆ. ಅಗತ್ಯವಿದ್ದರೆ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲು ಸಿದ್ಧತೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಮಳೆಯ ಪರಿಣಾಮ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 27 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಲಿದ್ದು, ರಾತ್ರಿಯ ವೇಳೆ ಚಳಿಯ ಅನುಭವ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಜುಲೈ 6ರವರೆಗೆ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ. ಸಾರ್ವಜನಿಕರು ಅನಗತ್ಯವಾಗಿ ಪ್ರವಾಹಪೀಡಿತ, ನದಿ ತೀರ ಹಾಗೂ ಗುಡ್ಡ ಪ್ರದೇಶಗಳಿಗೆ ತೆರಳದಂತೆ, ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here