ಖ್ಯಾತ ಶಿಕ್ಷಣ ತಜ್ಞ, ಸಂಘಟಕ ರಮಾನಂದ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026”

0
8

ಕಾಸರಗೋಡು : ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಸಂಘಟನಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಶಿಕ್ಷಣ ತಜ್ಞ ಮತ್ತು ಸಂಘಟಕರಾದ ರಮಾನಂದ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026” ಪ್ರದಾನ ಮಾಡಲಾಗುತ್ತಿದೆ.

ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ಕೆ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ರಮಾನಂದ ಅವರು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಿಕ್ಷಣ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹಲವು ವಿನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ.

ಅಲ್ಲದೆ, ಕನ್ನಡ ಸಾಹಿತ್ಯ ಪರಿಷತ್, ದಕ್ಷಿಣ ಕನ್ನಡ ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಗೌರವ ಕಾರ್ಯದರ್ಶಿಯಾಗಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ.

ಸಾಮಾಜಿಕ ಸೇವೆಯಲ್ಲಿಯೂ ಸಕ್ರಿಯರಾಗಿರುವ ಅವರು, ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317Dಯ ಕ್ಲಬ್ ಓರಿಯಂಟೇಶನ್ ಮುಖ್ಯ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದು, ವಿವಿಧ ಸಮಾಜಮುಖಿ ಹಾಗೂ ಸೇವಾ ಕಾರ್ಯಕ್ರಮಗಳ ಮೂಲಕ ಜನಮನ್ನಣೆ ಗಳಿಸಿದ್ದಾರೆ.

ಶಿಕ್ಷಣ, ಸಾಹಿತ್ಯ, ಸಮಾಜಸೇವೆ ಹಾಗೂ ಸಂಘಟನಾ ಕ್ಷೇತ್ರಗಳಲ್ಲಿ ನೀಡಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026” ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here