ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಜರಗನಹಳ್ಳಿ, ಕನಕಪುರ ರಸ್ತೆಯಲ್ಲಿ ನಡೆದಿದೆ. ಉದಯ್ ಕುಮಾರ್ ಎಂಬಾತನನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಉದಯ್ ಕುಮಾರ್ ಬಾರ್‌ನಲ್ಲಿದ್ದ ವೇಳೆ ಆರೋಪಿಗಳ ಕಡೆಗೆ ಗುರಾಯಿಸಿ ನೋಡಿದ್ದಾನೆ ಎಂಬ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಉದಯ್ ಕುಮಾರ್ ಅಲ್ಲಿಂದ ಹೊರಬಂದ ನಂತರ, ಇಬ್ಬರು ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿಕೊಂಡು ಬಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.
ದುಷ್ಕರ್ಮಿಗಳು ಉದಯ್ ಕುಮಾರ್‌ಗೆ ಚಾಕುವಿನಿಂದ ಹಲವು ಬಾರಿ ಇರಿದಿರುವುದಲ್ಲದೆ, ಬಿಯರ್ ಬಾಟಲಿಯಿಂದಲೂ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಉದಯ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಮತ್ತು ಮೃತ ಉದಯ್ ಕುಮಾರ್ ನಡುವೆ ಯಾವುದೇ ಪೂರ್ವ ಪರಿಚಯ ಇರಲಿಲ್ಲ ಎಂಬುದು ಬೆಳಕಿಗೆ ಬಂದಿದೆ. ಕೇವಲ ಗುರಾಯಿಸಿ ನೋಡಿದ ವಿಚಾರವನ್ನೇ ನೆಪ ಮಾಡಿಕೊಂಡು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳು ಕಾರ್ಯಾಚರಣೆ ಆರಂಭಿಸಿವೆ. ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

