ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿಘಾಟ್ ವ್ಯಾಪ್ತಿಯ ಕಪ್ಪಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಸಣ್ಣ ಪ್ರಮಾಣದ ಭೂಕುಸಿತ ಸಂಭವಿಸಿದೆ. ಸಕಲೇಶಪುರದಿಂದ ಮಂಗಳೂರು ಕಡೆಗೆ ಸಾಗುವ ಮಾರ್ಗದಲ್ಲಿ ಗುಡ್ಡದ ಮಣ್ಣು ರಸ್ತೆಗೆ ಕುಸಿದಿದ್ದು, ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಮಣ್ಣು ತೆರವುಗೊಳಿಸಿದ್ದಾರೆ.
ಭೂಕುಸಿತದ ಮಾಹಿತಿ ದೊರೆಯುತ್ತಿದ್ದಂತೆಯೇ ರಾಷ್ಟ್ರೀಯ ಹೆದ್ದಾರಿ ಸಿಬ್ಬಂದಿ ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಜೆಸಿಬಿ ಯಂತ್ರದ ಸಹಾಯದಿಂದ ರಸ್ತೆ ಮೇಲಿದ್ದ ಮಣ್ಣನ್ನು ತೆರವುಗೊಳಿಸಿ ಸಂಚಾರ ಸುಗಮವಾಗುವಂತೆ ಕ್ರಮ ಕೈಗೊಂಡರು. ಇದರಿಂದ ವಾಹನಗಳ ಓಡಾಟಕ್ಕೆ ಯಾವುದೇ ದೊಡ್ಡ ಅಡಚಣೆ ಉಂಟಾಗಿಲ್ಲ.
ಈ ಬಾರಿ ಮುಂಗಾರು ಆರಂಭಕ್ಕೂ ಮುನ್ನವೇ ಶಿರಾಡಿಘಾಟ್‌ನಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಸ್ಥಳಗಳನ್ನು ಜಿಲ್ಲಾಡಳಿತ ಗುರುತಿಸಿದ್ದು, ಅಂತಹ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಲಾಗಿದೆ. ಎಲ್ಲಿಯಾದರೂ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿದರೂ ಸಿಬ್ಬಂದಿ ತಕ್ಷಣ ತೆರಳಿ ತೆರವುಗೊಳಿಸುತ್ತಿದ್ದಾರೆ.
ನಿರಂತರ ಮಳೆಯ ಹಿನ್ನೆಲೆಯಲ್ಲಿ ಶಿರಾಡಿಘಾಟ್ ಮೂಲಕ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಹಾಗೂ ಮಳೆ ತೀವ್ರವಾಗಿರುವ ಸಂದರ್ಭಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಳೆ ಮುಂದುವರಿದರೆ ಭೂಕುಸಿತದ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ.

