ಮಹಾತ್ಮ ಗಾಂಧಿ ವಿಕಾಸ ಯೋಜನೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ -ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರಿಗೆ ಐವನ್ ಡಿ’ಸೋಜಾ ಸೂಚನೆ

0
4

ಮಹಾತ್ಮ ಗಾಂಧಿ ವಿಕಾಸ ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೆಲೆನ್ಸಿಯಾ ಹಾಗೂ ಪನ್ನೀರು ವಾರ್ಡ್‌ಗಳಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ ಅವರು ಇಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿದರು.

ವೆಲೆನ್ಸಿಯಾ ಮತ್ತು ಪನ್ನೀರು ವಾರ್ಡ್‌ಗಳಲ್ಲಿ ಕೈಗೊಂಡಿರುವ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು I ಶೀಘ್ರ ನಿವಾರಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಸಭೆಯಲ್ಲಿ ಸುಮಾರು ಐದು ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಶರೀಫ್ ಕನ್ಸೆಕ್ಷನ್ ಸಂಸ್ಥೆಯ ಕಾಮಗಾರಿಗಳ ಪ್ರಗತಿಯ ಕುರಿತು ವಿಶೇಷವಾಗಿ ಪರಿಶೀಲನೆ ನಡೆಸಲಾಯಿತು. ಗುತ್ತಿಗೆದಾರ ಇನ್ಸಾಲ್, ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜ್, ಸ್ಥಳೀಯ ಕಿರಿಯ ಇಂಜಿನಿಯರ್ ಸೈದಾ ಹಾಗೂ ಸ್ಥಳೀಯ ಮುಖಂಡ ಅಶೋಕ್ ಮೆಂಡೋನ್ಸಾ ಸೇರಿದಂತೆ ಇತರರು ಭಾಗವಹಿಸಿ ಕಾಮಗಾರಿಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾ ಅವರು, ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾಮಗಾರಿಗಳನ್ನು ಕ್ರಮಬದ್ಧವಾಗಿ ಹಾಗೂ ಸಾರ್ವಜನಿಕರಿಗೆ ಕನಿಷ್ಠ ತೊಂದರೆಯಾಗುವ ರೀತಿಯಲ್ಲಿ ನಿರ್ವಹಿಸಬೇಕು. ರಸ್ತೆಗಳನ್ನು ಅಗೆದು ದೀರ್ಘಕಾಲ ಹಾಗೆಯೇ ಬಿಟ್ಟು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟುಮಾಡುವುದು ಯಾವುದೇ ಕಾರಣಕ್ಕೂ ಸಹನೀಯವಲ್ಲ ಎಂದು ಎಚ್ಚರಿಸಿದರು.

ಇನ್ನೂ ಆರಂಭವಾಗದಿರುವ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಬೇಕು. ಈಗಾಗಲೇ ಅಗೆದಿರುವ ರಸ್ತೆಗಳನ್ನು ತಕ್ಷಣ ದುರಸ್ತಿಪಡಿಸಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಬಕ್ಕೆ ಅವಕಾಶ ನೀಡದೆ, ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡಿ ಎಲ್ಲ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಐವನ್ ಡಿ’ಸೋಜಾ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಗರಾಜ್, ಜೂನಿಯರ್ ಇಂಜಿನಿಯರ್ ಸೈದಾ, ಸ್ಥಳೀಯರಾದ ಅಶೋಕ್ ಮೆಂಡೋನ್, ಡ್ರೈವ್ ಸಾಂಸನ್, ಅನಿಲ್ ಲೋಬೋ ಹಾಗೂ ಗುತ್ತಿಗೆದಾರ ಇಕ್ಸಾಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here