ಭಾರೀ ಮಳೆ ಎಫೆಕ್ಟ್ : ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

0
43

ಮಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ ಬಿರುಸುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಹಲವು ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ‘ರೆಡ್ ಅಲರ್ಟ್’ ಘೋಷಿಸಿದೆ.

ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಹಲವು ಭಾಗಗಳಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ನದಿ ತೀರ, ತಗ್ಗು ಪ್ರದೇಶಗಳು ಹಾಗೂ ಭೂಕುಸಿತ ಸಂಭವಿಸುವ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ತಾಲೂಕುಗಳು, ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಬೆಳಗಾವಿಯ ಮೂರು ತಾಲೂಕುಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.

ಹಾಸನ ಜಿಲ್ಲೆಯ ಮಲೆನಾಡು ಭಾಗವಾದ ಸಕಲೇಶಪುರ ತಾಲೂಕಿನಲ್ಲಿ ನಿರಂತರ ಭಾರೀ ಮಳೆ ಹಾಗೂ ಬಿರುಗಾಳಿ ಹಿನ್ನೆಲೆಯಲ್ಲಿ ಭೂಕುಸಿತ ಮತ್ತು ಪ್ರವಾಹದ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆ ತಾಲೂಕು ಆಡಳಿತ ಕಠಿಣ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತಂದಿದೆ.

ಮುಂದಿನ ಆದೇಶದವರೆಗೆ ಯಾವುದೇ ರೀತಿಯ ಟ್ರೆಕ್ಕಿಂಗ್‌ಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಹೋಂ ಸ್ಟೇ, ರೆಸಾರ್ಟ್ ಹಾಗೂ ಪ್ರವಾಸೋದ್ಯಮ ನಿರ್ವಾಹಕರು ಪ್ರವಾಸಿಗರನ್ನು ಟ್ರೆಕ್ಕಿಂಗ್‌ಗೆ ಕರೆದೊಯ್ಯದಂತೆ ಸೂಚನೆ ನೀಡಲಾಗಿದೆ. ಆದೇಶ ಉಲ್ಲಂಘಿಸಿದರೆ ಸಂಭವಿಸುವ ಅವಘಡಗಳಿಗೆ ಸಂಬಂಧಿಸಿದವರೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಆಡಳಿತ ಎಚ್ಚರಿಕೆ ನೀಡಿದೆ.

ಇದರ ಜೊತೆಗೆ ಜಲಪಾತಗಳು, ನದಿಗಳು, ಹಳ್ಳ-ಕೊಳ್ಳಗಳು, ಗುಡ್ಡಗಾಡು ಪ್ರದೇಶಗಳು, ಇಳಿಜಾರು ಪ್ರದೇಶಗಳು ಹಾಗೂ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳವರೆಗೆ ಮಳೆ ತೀವ್ರವಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯ ಪ್ರಯಾಣಗಳನ್ನು ತಪ್ಪಿಸಿ, ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದೆ.

LEAVE A REPLY

Please enter your comment!
Please enter your name here