ಕಾಸರಗೋಡು : ನಿವೃತ್ತ ಶಿಕ್ಷಕ, ಯಕ್ಷಗಾನ ಅರ್ಥಧಾರಿ, ಕಾಸರಗೋಡಿನ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕ್ರಿಯಾಶೀಲವಾದ, ಎಡನೀರು ಶ್ರೀಮಠದ ವ್ಯವಸ್ಥಾಪಕರಾದ ರಾಜೇಂದ್ರ ಕಲ್ಲೂರಾಯರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು.
ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಗೌರವ ಪ್ರದಾನ ನಡೆಯಲಿದೆ.
ಕಾಸರಗೋಡಿನ ಕನ್ನಡ ಭವನ ಪ್ರಕಾಶನ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿಯ ಸಹಕಾರದಲ್ಲಿ ಈ ಸಮ್ಮೇಳನ ನಡೆಯಲಿದೆ. ಸಾಹಿತ್ಯ ಕ್ಷೇತ್ರದಲ್ಲೂ ಕ್ರಿಯಾಶೀಲರಾದ ರಾಜೇಂದ್ರ ಕಲ್ಲೂರಾಯರು ಅನೇಕ ಸಂಸ್ಮರಣಾ ಗ್ರಂಥಗಳ ಸಂಪಾದಕ ಬಳಗದಲ್ಲಿ ಕೆಲಸ ಮಾಡಿದ್ದಾರೆ.
ತಮ್ಮ ಕರ್ತವ್ಯದಲ್ಲಿ ವಿವೇಕ, ವಿನಯ, ತಾಳ್ಮೆ, ಸರಳತೆ, ದುಡಿಮೆ, ಸಾಮರ್ಥ್ಯ ಇರುವ ಕಲ್ಲೂರಾಯರಿಗೆ ಈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದೆಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ ಹಾಗೂ ಕಾಸರಗೋಡಿನ ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

