ಮೂಡುಬಿದಿರೆ : ಸಮೀಪದ ಕಲ್ಲಬೆಟ್ಟು ಕರಿಂಜೆಯಲ್ಲಿರುವ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದ 17 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೃತ ವಿದ್ಯಾರ್ಥಿಯನ್ನು ವಿಜೇತ್ (17) ಎಂದು ಗುರುತಿಸಲಾಗಿದೆ. ಆತ ಮೂಲತಃ ಮೈಸೂರು ಜಿಲ್ಲೆಯ ನಿವಾಸಿಯಾಗಿದ್ದು, ಕರಿಂಜೆಯಲ್ಲಿರುವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದನು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ನಡೆದ ದಿನ ಸಂಜೆ ವಿಜೇತ್ ತನ್ನ ತಂದೆಗೆ ದೂರವಾಣಿ ಕರೆ ಮಾಡಿದ್ದಾನೆ. ಮಾತುಕತೆಯ ವೇಳೆ ತಂದೆ ಕೆಲವು ಸಲಹೆ ಹಾಗೂ ಬುದ್ಧಿಮಾತು ಹೇಳಿದ್ದರೆಂದು ತಿಳಿದುಬಂದಿದೆ. ಅದರ ಬಳಿಕ ಆತ ಈ ದುರ್ಘಟನೆಗೆ ಮುಂದಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕುಟುಂಬ ಸದಸ್ಯರು ಹಾಗೂ ಕಾಲೇಜು ಆಡಳಿತದಿಂದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ವಿದ್ಯಾರ್ಥಿಯ ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
ವಿದ್ಯಾರ್ಥಿಯ ಅಕಾಲಿಕ ಸಾವಿನಿಂದ ಕಾಲೇಜು ಆವರಣದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
