ಬಂಟ್ವಾಳ ಹೆದ್ದಾರಿಯಲ್ಲಿ ಅವಘಡ : ಪಾದಚಾರಿಗಳ ಮೇಲೆ ಹರಿದ ಕಾರು

0
27

ಬಂಟ್ವಾಳ : ತಾಲೂಕಿನ ಶಾಂತಿ ಅಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ವೇಗವಾಗಿ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ಅಲ್ಲಿದ್ದ ಪಾದಚಾರಿಗಳಿಗೂ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ತಕ್ಷಣ ಗಾಯಾಳುಗಳ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

ಘಟನೆಯಲ್ಲಿ ಪಾದಚಾರಿಗಳಾಗಿದ್ದ ಫಾತಿಮಾ, ಅವರ ಪುತ್ರಿ ಸಲ್ಮೀಯಾ ಹಾಗೂ ಶೌಕತ್ ಅಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ನಿಯಂತ್ರಣ ತಪ್ಪಲು ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.