ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ 23 ವರ್ಷದ ಯುವತಿ ಲಾವಣ್ಯ ಹತ್ಯೆಯಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಏಕಮುಖ ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಮೃತಳನ್ನು ಕಕ್ಕೆಪದವು ನಿವಾಸಿ ಹಾಗೂ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ಎಂದು ಗುರುತಿಸಲಾಗಿದೆ. ಆರೋಪಿ ಚೇತನ್, ಲಾವಣ್ಯಳ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಗುರುವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಲಾವಣ್ಯ ಮನೆಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದಾಗ, ಆರೋಪಿ ಸ್ಥಳಕ್ಕೆ ಬಂದು ತನ್ನ ಬ್ಯಾಗ್‌ನಲ್ಲಿದ್ದ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಲಾವಣ್ಯ ತಪ್ಪಿಸಿಕೊಳ್ಳಲು ಓಡಿದರೂ, ಬೆನ್ನಟ್ಟಿ ಬಸ್ ನಿಲ್ದಾಣದಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ಆರೋಪಿ ಪರಾರಿಯಾಗಿದ್ದಾನೆ.
ತೀವ್ರ ರಕ್ತಸ್ರಾವಗೊಂಡ ಲಾವಣ್ಯ ಅವರನ್ನು ಸಾರ್ವಜನಿಕರು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಆರೋಪಿಯ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

