ಲಾವಣ್ಯ ಹತ್ಯೆ ಖಂಡನೀಯ : ಆರೋಪಿಗೆ ಕಠಿಣ ಶಿಕ್ಷೆಯಾಗಲಿ – ಕಿರಣ್ ಚಂದ್ರ ಡಿ. ಪುಷ್ಪಗಿರಿ

0
66

ಬಂಟ್ವಾಳ : ಬಿ.ಸಿ.ರೋಡ್‌ನಲ್ಲಿ ಲಾವಣ್ಯ ಎಂಬ ಯುವತಿಯನ್ನು ಹಾಡಹಗಲೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸಮಾಜವನ್ನೇ ಬೆಚ್ಚಿಬೀಳಿಸಿದ್ದು, ಇದು ಅತ್ಯಂತ ಖಂಡನೀಯ ಕೃತ್ಯವಾಗಿದೆ ಎಂದು ಬೆಳ್ತಂಗಡಿಯ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕರು ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಂತಹ ಸ್ಥಳದಲ್ಲಿ ಮಾರಕಾಸ್ತ್ರ ಬಳಸಿ ಇಂತಹ ಭೀಕರ ಅಪರಾಧ ಎಸಗಿರುವುದು ರಾಜ್ಯದಲ್ಲಿ ಕಾನೂನಿನ ಭಯದ ಕೊರತೆಯನ್ನು ಎತ್ತಿ ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಪ್ರಕರಣದ ಆರೋಪಿಯ ವಿರುದ್ಧ ಪೊಲೀಸರು ಯಾವುದೇ ರಾಜಿ ಮಾಡಿಕೊಳ್ಳದೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಸಮಾಜಕ್ಕೆ ಸ್ಪಷ್ಟ ಸಂದೇಶ ರವಾನಿಸಬೇಕಾಗಿದೆ ಎಂದು ಅವರು ಒತ್ತಾಯಿಸಿದರು.

ಮುಂದೆ ಇಂತಹ ದುರ್ಘಟನೆಗಳು ಮರುಕಳಿಸದಂತೆ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಿ, ಮಹಿಳೆಯರು ಮತ್ತು ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವ ನಿಟ್ಟಿನಲ್ಲಿ ಪೊಲೀಸರು ಹಾಗೂ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಿರಣ್ ಚಂದ್ರ ಡಿ. ಪುಷ್ಪಗಿರಿ ಆಗ್ರಹಿಸಿದ್ದಾರೆ.