ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ಹಿಂಪಡೆಯುವಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹ

0
46

ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ-ಚೆನ್ನಯ ಕಂಬಳಕ್ಕೆ ವಿಧಿಸಲಾಗಿರುವ ತಡೆಯನ್ನು ತಕ್ಷಣ ಹಿಂಪಡೆಯುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು, ಕರಾವಳಿಯ ಸಂಪ್ರದಾಯ, ಸಂಸ್ಕೃತಿ ಹಾಗೂ ಜನರ ಭಾವನೆಗಳೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಕಂಬಳಕ್ಕೆ ತಡೆ ವಿಧಿಸಿರುವುದು ಸರಿಯಲ್ಲ ಎಂದು ಹೇಳಿದರು.

ಕರಾವಳಿಯ ಸಾಂಪ್ರದಾಯಿಕ ಕಂಬಳಗಳ ವಿಚಾರದಲ್ಲಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಬಡಗುಬೆಟ್ಟು ಕೋಟಿ-ಚೆನ್ನಯ ಕಂಬಳಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದರು.

ಕಂಬಳ ಆಯೋಜನೆಗೆ ವಿಧಿಸಲಾಗಿರುವ ತಡೆಯನ್ನು ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಹಿಡಿದು, ಕರಾವಳಿಯ ಕಂಬಳ ಪರಂಪರೆಗೆ ಯಾವುದೇ ಧಕ್ಕೆಯಾಗದಂತೆ ಸರ್ಕಾರ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.