ಇಂದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ? ಕೇಂದ್ರ-ಸಿಜೆಪಿ ಮಾತುಕತೆಯತ್ತ ದೇಶದ ಚಿತ್ತ

0
37

ನವದೆಹಲಿ : ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಸಿಜೆಪಿ ಮುಖಂಡರ ನಡುವೆ ಇಂದು (ಶನಿವಾರ) ಮೂರನೇ ಸುತ್ತಿನ ಮಹತ್ವದ ಮಾತುಕತೆ ನಡೆಯಲಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತ ನಿರ್ಧಾರದತ್ತ ದೇಶದ ಗಮನ ನೆಟ್ಟಿದೆ.

ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆ ನಿರ್ಣಾಯಕ ಹಂತ ತಲುಪಿದ್ದು, ಹಲವು ದಿನಗಳಿಂದ ನಡೆಯುತ್ತಿರುವ ಚರ್ಚೆ ಮತ್ತು ಸಂಧಾನದ ಬಳಿಕ ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಶುಕ್ರವಾರ ನಡೆದ ಎರಡನೇ ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವಿನಲ್ಲಿ ಕೆಲಮಟ್ಟಿನ ಸಡಿಲಿಕೆ ತೋರಿದ್ದು, ಸಿಜೆಪಿ ಮುಂದಿಟ್ಟಿದ್ದ ಮೂರು ಪ್ರಮುಖ ಬೇಡಿಕೆಗಳಲ್ಲಿ ಎರಡು ಬೇಡಿಕೆಗಳನ್ನು ಒಪ್ಪಿಕೊಂಡಿದೆ.

ಅದರಂತೆ, ಜುಲೈ 20ರಂದು ನಡೆದ ‘ಚಲೋ ಸಂಸತ್’ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಿಸದಿರಲು ಹಾಗೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡಲು ಕೇಂದ್ರ ಸರ್ಕಾರ ಸಮ್ಮತಿಸಿದೆ.

ಇದರ ಜೊತೆಗೆ, ಸಚಿವರ ನಿವಾಸದ ಬದಲು ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಮಾತುಕತೆ ನಡೆಸುವ ಸಿಜೆಪಿಯ ಬೇಡಿಕೆಯನ್ನು ಕೂಡ ಸರ್ಕಾರ ಒಪ್ಪಿಕೊಂಡಿದೆ.

ಇದೀಗ ಉಳಿದಿರುವ ಪ್ರಮುಖ ಬೇಡಿಕೆಯಾದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತಾಗಿ ಕೇಂದ್ರ ಸರ್ಕಾರ ಇಂದು ಮಧ್ಯಾಹ್ನದೊಳಗೆ ತನ್ನ ನಿಲುವು ತಿಳಿಸುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ, ಮೂರನೇ ಸುತ್ತಿನ ಮಾತುಕತೆಯ ಬಳಿಕ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಹೀಗಾಗಿ ಇಂದು ನಡೆಯಲಿರುವ ಸಭೆಯಲ್ಲಿ ಕೇಂದ್ರ ಸರ್ಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಹಾಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಾರೆಯೇ ಎಂಬುದರ ಬಗ್ಗೆ ದೇಶಾದ್ಯಂತ ಕುತೂಹಲ ಮನೆಮಾಡಿದೆ.