ಕಾಫಿ ತೋಟದಲ್ಲಿ ದುರಂತ : ಇಬ್ಬರು ಮಹಿಳಾ ಕಾರ್ಮಿಕರು ಮೃತ

0
80

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಸಾಮಾನ್ಯ ದಿನದಂತೆ ಕಾರ್ಮಿಕರು ಕಾಫಿ ತೋಟದಲ್ಲಿ ಕೆಲಸದಲ್ಲಿ ನಿರತರಾಗಿದ್ದಾಗ ಏಕಾಏಕಿ ಬೃಹತ್ ಗಾತ್ರದ ಮರ ನಿಯಂತ್ರಣ ತಪ್ಪಿ ಅವರ ಮೇಲೆ ಉರುಳಿದೆ. ಭಾರೀ ಗಾತ್ರದ ಮರದಡಿ ಸಿಲುಕಿದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಇತರ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ಅಧಿಕಾರಿಗಳು ತಕ್ಷಣವೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೋಮವಾರಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ತಾಲೂಕಿನ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುರಂತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

ಈ ದುರ್ಘಟನೆ ಕಾಫಿ ತೋಟಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರ ಸುರಕ್ಷತೆ ಕುರಿತು ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದ್ದು, ಮಳೆಗಾಲದಲ್ಲಿ ಅಪಾಯಕಾರಿ ಮರಗಳ ತೆರವು ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಅಗತ್ಯವನ್ನು ಸ್ಥಳೀಯರು ಒತ್ತಾಯಿಸಿದ್ದಾರೆ.