ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಚೆಕ್ ವಿತರಣೆ: ಶಾಸಕ ಹರೀಶ್ ಪೂಂಜ ಭೇಟಿ

0
5

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಮುಚ್ಚಿರಡ್ಕ ಸಮೀಪ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಕೃಷಿ ಕಾರ್ಮಿಕ ಬಾಲಕೃಷ್ಣ ಗೌಡ ಅವರ ನಿವಾಸಕ್ಕೆ ಶಾಸಕ ಹರೀಶ್ ಪೂಂಜ ಅವರು ಭಾನುವಾರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾಗಿರುವ ಒಟ್ಟು ₹20 ಲಕ್ಷ ಪರಿಹಾರಧನ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿದ ಶಾಸಕ ಹರೀಶ್ ಪೂಂಜ, ಪ್ರಥಮ ಹಂತವಾಗಿ ₹5 ಲಕ್ಷ ಪರಿಹಾರದ ಚೆಕ್‌ನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು. ಉಳಿದ ₹15 ಲಕ್ಷ ಪರಿಹಾರಧನವನ್ನು ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡ ತಕ್ಷಣ ಮೃತರ ವಾರಸುದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಡಾನೆ ದಾಳಿಯಿಂದ ಅಮಾಯಕ ಜೀವ ಕಳೆದುಕೊಂಡಿರುವುದು ಅತ್ಯಂತ ದುಃಖಕರ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ, ಮೃತರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ಪರಿಹಾರ, ಸೌಲಭ್ಯ ಹಾಗೂ ನೆರವುಗಳು ಯಾವುದೇ ವಿಳಂಬವಾಗದಂತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಕಾಡಾನೆ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಜನರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಅರಣ್ಯ ಇಲಾಖೆ ಸ್ಥಳೀಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ವಿಭಾಗದ ಡಿಎಫ್‌ಒ ರವಿಶಂಕರ ಸಿ., ಎಸಿಎಫ್ ಸುಬ್ಬಯ್ಯ ನಾಯ್ಕ, ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ., ತಹಶೀಲ್ದಾರ್ ಎಸ್.ಎನ್. ನರಗುಂದ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ, ಗ್ರಾಮ ಆಡಳಿತ ಅಧಿಕಾರಿ ವಿಜೇತ್, ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ನವೀನ್ ಸೇರಿದಂತೆ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.