ಪ್ರಧಾನ ಕಾರ್ಯದರ್ಶಿ ಯಾಗಿ ದಯಾನಂದ ಕೆ ನೂಜಿಬಾಳ್ತಿಲ
ಕಡಬ : ತುಳು ಭಾಷೆ, ಸಂಸ್ಕೃತಿ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಹೆಸರಾಗಿರುವ ವಿಶ್ವ ತುಳುವೆರ್ (ರಿ.) ಸಂಘಟನೆಯ ಕಡಬ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ತಿರುಮಲೇಶ್ವರ ಎಸ್. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಕೆ. ನೂಜಿಬಾಳ್ತಿಲ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ತಿರುಮಲೇಶ್ವರ ಎಸ್. ಅವರು ಹಲವು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ತುಳು ಭಾಷೆ ಮತ್ತು ಸಂಸ್ಕೃತಿಯ ಉಳಿವು-ಬೆಳವಣಿಗೆಗಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ. ಯುವ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿರುವ ಅವರು ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ದಯಾನಂದ ಕೆ. ನೂಜಿಬಾಳ್ತಿಲ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಉತ್ತಮ ಅನುಭವ ಹೊಂದಿದ್ದಾರೆ. ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಪ್ರಸ್ತುತ ಕನ್ನಡಪ್ರಭ ದಿನಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದು, ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಗಮನ ಸೆಳೆದಿದ್ದಾರೆ.
ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ವಿಶ್ವ ತುಳುವೆರ್ (ರಿ.) ಕಡಬ ತಾಲೂಕು ಘಟಕವು ತುಳು ಭಾಷೆ, ಸಂಸ್ಕೃತಿ, ಸಾಹಿತ್ಯ ಹಾಗೂ ಸಮಾಜಸೇವಾ ಚಟುವಟಿಕೆಗಳಿಗೆ ಇನ್ನಷ್ಟು ಉತ್ತೇಜನ ನೀಡಲಿದೆ ಎಂಬ ವಿಶ್ವಾಸವನ್ನು ಸಂಘಟನೆಯ ಸದಸ್ಯರು ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವ ತುಳುವೆರ್ (ರಿ.) ಸಂಘಟನೆಯ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು ಮತ್ತು ತುಳುವಾಭಿಮಾನಿಗಳು ತಿರುಮಲೇಶ್ವರ ಎಸ್. ಹಾಗೂ ದಯಾನಂದ ಕೆ. ನೂಜಿಬಾಳ್ತಿಲ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಅವಧಿಯಲ್ಲಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.

