ಪುತ್ತೂರು : ಮಾಣಿಲದ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ದಿವ್ಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವ 27ನೇ ವರ್ಷದ 48 ದಿನಗಳ ಶ್ರೀ ಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಅಂಗವಾಗಿ ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕ್ರಮದ ಗೌರವಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಜುಲೈ 12ರಿಂದ ಆಗಸ್ಟ್ 28ರವರೆಗೆ ಒಂದು ಮಂಡಲದ ಅವಧಿಯಲ್ಲಿ ಶ್ರೀ ಕ್ಷೇತ್ರದಲ್ಲಿ ಪ್ರತಿದಿನ ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆಯುತ್ತಿವೆ ಎಂದು ತಿಳಿಸಿದರು.
ಈ ಮಹೋತ್ಸವದ ವಿಶೇಷ ಆಕರ್ಷಣೆಯಾಗಿ ಆಗಸ್ಟ್ 9ರಂದು ಬೆಳಿಗ್ಗೆ 10.30ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ಬೃಹತ್ ಹೊರೆಕಾಣಿಕೆ ಮೆರವಣಿಗೆ ಆರಂಭವಾಗಲಿದೆ. ನೂರಾರು ವಾಹನಗಳು, ಭಕ್ತರು, ಮಹಿಳೆಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮೆರವಣಿಗೆಯಲ್ಲಿ ಭಾಗವಹಿಸಿ, ಪೂಜಾ ಸಾಮಗ್ರಿ, ಹಣ್ಣು-ಹಂಪಲು, ಧಾನ್ಯ, ತೆಂಗಿನಕಾಯಿ ಸೇರಿದಂತೆ ವಿವಿಧ ಕಾಣಿಕೆಗಳನ್ನು ಹೊತ್ತು ಮಾಣಿಲ ಶ್ರೀ ಕ್ಷೇತ್ರದತ್ತ ತೆರಳಲಿದ್ದಾರೆ ಎಂದು ಅವರು ಹೇಳಿದರು.
ಮೆರವಣಿಗೆಗೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಶಿಸ್ತುಬದ್ಧವಾಗಿ ಹಾಗೂ ಭಕ್ತಿಪೂರ್ವಕವಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಭಕ್ತರ ಅನುಕೂಲಕ್ಕಾಗಿ ಸ್ವಯಂಸೇವಕರ ತಂಡ, ಸಂಚಾರ ವ್ಯವಸ್ಥೆ, ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಲಭ್ಯಗಳನ್ನೂ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೊರೆಕಾಣಿಕೆ ಮೆರವಣಿಗೆಯಲ್ಲಿ ಪಾಲ್ಗೊಂಡು ಶ್ರೀ ದುರ್ಗಾ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗುವಂತೆ ಕ್ಷೇತ್ರದ ವತಿಯಿಂದ ಆಹ್ವಾನಿಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಪದಾಧಿಕಾರಿಗಳು ಹಾಗೂ ವಿವಿಧ ಸಮಿತಿಗಳ ಸದಸ್ಯರು ಉಪಸ್ಥಿತರಿದ್ದರು.

