ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ, ಉದ್ಯಮಿ ಡೇವಿಡ್‌ ಡಿಸೋಜಾ ಮೇಲೆ ಗುಂಡಿನ ದಾಳಿ

0
36

ಉಡುಪಿ : ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಪ್ರಭಾವಿ ಗುತ್ತಿಗೆದಾರ ಡೇವಿಡ್ ಡಿಸೋಜ (ಸೈಂಟ್ ಫ್ರಾನ್ಸಿಸ್ ಜೆವಿಯರ್ ಚರ್ಚ್ ಬಳಿ) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಿಲಾರು ಗ್ರಾಮದಲ್ಲಿ ನಡೆದಿದೆ.
ಸೈಂಟ್ ಫ್ರಾನ್ಸಿಸ್ ಜೆವಿಯರ್ ಚರ್ಚ್ ಮುಂಭಾಗದಲ್ಲಿ ಈ ಕೃತ್ಯ ನಡೆದಿದ್ದು, ಬೈಕ್‌ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಡೇವಿಡ್ ಅವರತ್ತ ದಿಢೀರ್ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯಿಂದ ತೀವ್ರವಾಗಿ ರಕ್ತಸ್ರಾವಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಸ್ಥಳಕ್ಕೆ ಶ್ವಾನದಳ, ಎಸ್‌ಒಸಿಒ ಭೇಟಿ
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಶಿರ್ವಾ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ಉನ್ನತ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ನಡೆದ ಸ್ಥಳಕ್ಕೆ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿಗಳ ತಂಡ’ ಹಾಗೂ ಶ್ವಾನ ದಳ ಆಗಮಿಸಿದ್ದು, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ.
ಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹಳೆಯ ವೈಷಮ್ಯ ಅಥವಾ ವೃತ್ತಿಪರ ಸ್ಪರ್ಧೆಯ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪರಾರಿಯಾದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.