ಕಳತ್ತೂರಿನಲ್ಲಿ ದೇಶಭಕ್ತಿಯ ಸಂಭ್ರಮ; ಸಾಧನೆಗೈದವರಿಗೆ ಸನ್ಮಾನ

0
8

ಕಾಪು: ಕಳತ್ತೂರಿನ ಕುಶಲ ಶೇಖರ ಶೆಟ್ಟಿ ಇಂಟರ್‌ನ್ಯಾಷನಲ್ ಆಡಿಟೋರಿಯಂ ಹಾಗೂ ಕುಶಲ ಶೇಖರ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ ಆ.15ರಂದು ಮಧ್ಯಾಹ್ನ 4 ಗಂಟೆಗೆ ಕುಶಲ ಶೇಖರ ಬಿ. ಶೆಟ್ಟಿ ಆಡಿಟೋರಿಯಂನಲ್ಲಿ ನಡೆಯಲಿದೆ.

ಕೇಮಾರು ಶ್ರೀ ಕ್ಷೇತ್ರದ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರ ಆಶೀರ್ವಚನದೊಂದಿಗೆ ಕಾರ್ಯಕ್ರಮ ನಡೆಯಲಿದ್ದು, ಕುಶಲ ಶೇಖರ ಬಿ. ಶೆಟ್ಟಿ ಆಡಿಟೋರಿಯಂನ ಆಡಳಿತ ನಿರ್ದೇಶಕ ಶೇಖರ್ ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸರ್ಕಾರದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಾಪುವಿನ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಸಾಯಿ ರಾಧಾ ಗ್ರೂಪ್ ಆಡಳಿತ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ, ಕಾಪು ಮಹಿಳಾ ಮಂಡಲ ಹಾಗೂ ಬಂಟರ ಮಹಿಳಾ ಮಂಡಲದ ಅಧ್ಯಕ್ಷೆ ಜಯಲಕ್ಷ್ಮಿ ಎಸ್. ಶೆಟ್ಟಿ, ಹಿರಿಯ ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ, ಶಿರ್ವ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮರಮದ ಹಾಗೂ ಕುತ್ಯಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಶೆಣೈ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಸನ್ನಿಧಿ ಕಶೆಕೋಡಿ, ದಿವಾಕರ ಬಿ. ಶೆಟ್ಟಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ನಾಲ್ಕು ರಾಜ್ಯಗಳಲ್ಲಿ ಆರು ಭಾಷೆಗಳ ಮೂಲಕ ಮತದಾನ ಜಾಗೃತಿ ಮೂಡಿಸಿದ ಬಾಲಕಿ ಕು| ಸನ್ನಿಧಿ ಕಶೆಕೋಡಿ ಹಾಗೂ ಕಾಪು ಕಳತ್ತೂರಿನ ಸಮಾಜ ಸೇವಕ, ಗ್ರಾಮೀಣ ಅಂಚೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿವಾಕರ ಬಿ. ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ಇದೇ ಸಂದರ್ಭದಲ್ಲಿ ಸುತ್ತಮುತ್ತಲಿನ ಶಾಲಾ–ಕಾಲೇಜುಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಗೌರವಿಸಲಾಗುವುದು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮ

ಸ್ವಾತಂತ್ರ್ಯೋತ್ಸವದ ಅಂಗವಾಗಿ ಗ್ರಾವಿಟಿ ಡ್ಯಾನ್ಸ್ ಗ್ರೂಪ್ ಕಾಪು ಹಾಗೂ ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ನೃತ್ಯ ಪ್ರದರ್ಶನಗಳು ನಡೆಯಲಿವೆ. ಕಾರ್ಯಕ್ರಮವನ್ನು ಕರಂದಾಡಿಯ ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ ನಿರೂಪಿಸಲಿದ್ದಾರೆ.

ಕುಶಲ ಶೇಖರ್ ಬಿ. ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕುಶಲ ಶೇಖರ್ ಬಿ. ಶೆಟ್ಟಿ ಹಾಗೂ ಟ್ರಸ್ಟ್‌ನ ಎಲ್ಲ ಸದಸ್ಯರು ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ತಿಳಿಸಿದ್ದಾರೆ.