ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್ : ಸವಾರ ಮೃತ

0
110

ಉಡುಪಿ : ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನಲ್ಲಿ ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಮೃತರನ್ನು ಆತ್ರಾಡಿ ನಿವಾಸಿ ಸನತ್ (21) ಎಂದು ಗುರುತಿಸಲಾಗಿದೆ. ಅವರು ಮಣಿಪಾಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರೊಂದಿಗೆ ಊಟ ಮುಗಿಸಿ, ರಾತ್ರಿ ಸುಮಾರು 1.25ಕ್ಕೆ ಸ್ನೇಹಿತನಿಗೆ ಸೇರಿದ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಸನತ್ ಬೈಕ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು, ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಸನತ್‌ ಅದಾಗಲೇ ಮೃತಪಟ್ಟಿದ್ದರು. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.