ಎಸ್‌ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

0
8


ಮಂಗಳೂರು, ಅಗಸ್ಟ್ 12 ರಂದು ಎಸ್‌ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆಯನ್ನು ನೀಡಲಾಯಿತು. ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹರಾದ ಡಾ. ಎಸ್. ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾ. ವಾಸಪ್ಪ ಗೌಡ ಅವರು ಡಾ. ಎಸ್. ಆರ್. ರಂಗನಾಥನ್ ಅವರ ಜೀವನ ಮತ್ತು ಸಾಧನೆಗಳನ್ನು ಪರಿಚಯಿಸಿದರು. ಗ್ರಂಥಾಲಯ ವಿಜ್ಞಾನದ ಐದು ನಿಯಮಗಳನ್ನು ವಿವರಿಸಿದ ಅವರು, ವಿದ್ಯಾರ್ಥಿಗಳು ಗ್ರಂಥಾಲಯಗಳನ್ನು ಸಂರಕ್ಷಿಸಿ, ಅಭಿವೃದ್ಧಿಪಡಿಸಿ ಹಾಗೂ ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾಲೇಜಿನ ಸಹೋದರ ಸಂಸ್ಥೆಯಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಗ್ರಂಥಪಾಲಕರಾದ ಶ್ರೀಮತಿ ವಿಶಾಲಾಕ್ಷಿ ಅವರು ಗೌರವ ಅತಿಥಿಯಾಗಿ ಉಪಸ್ಥಿತರಿದ್ದರು. ಮುಖ್ಯ ಅತಿಥಿ ಹಾಗೂ ಗೌರವ ಅತಿಥಿಗಳನ್ನು ಪುಷ್ಪಗುಚ್ಛ ಹಾಗೂ ಸ್ಮರಣಿಕೆ ನೀಡಿ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.
ಎಸ್‌ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕರಾದ ಶ್ರೀಮತಿ ಹೇಮಾವತಿ ಅವರು ರಾಷ್ಟ್ರೀಯ ಗ್ರಂಥಪಾಲಕರ ದಿನದ ಮಹತ್ವ ಹಾಗೂ ಗ್ರಂಥಾಲಯಗಳ ಪ್ರಾಮುಖ್ಯತೆಯನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಅವರು ಸ್ವರಚಿತ ‘ಗ್ರಂಥ ಗೌರವ’ ಎಂಬ ಕವನವನ್ನು ವಾಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಹಾರ್ದಿಕ್ ಚೌಹಾಣ್ ವಹಿಸಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸಾನ್ವಿ ಎಂ. ಎಸ್ ಸ್ವಾಗತ ಭಾಷಣ ಮಾಡಿದರು. ಹಾಗೂ ಉಪಾಧ್ಯಕ್ಷ ರಾಹುಲ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅಪೂರ್ವ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.
ಜ್ಞಾನಾರ್ಜನೆ, ಓದುವ ಹವ್ಯಾಸ ಹಾಗೂ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಗ್ರಂಥಾಲಯಗಳ ಮಹತ್ವವನ್ನು ಸಾರಿದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.