ಬಾಲಕಿಯನ್ನು ಕರೆದೊಯ್ಯುತ್ತಿದ್ದ ಕಾರು ತಡೆದು ಹಲ್ಲೆ: ಐವರ ವಿರುದ್ಧ ಪ್ರಕರಣ

0
128

ಉಪ್ಪಿನಂಗಡಿ : ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರ ವಾಹನವನ್ನು ತಡೆದು, ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕಾರ್ಕಳ ತಾಲೂಕಿನ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ನೀಡಿದ ದೂರಿನ ಪ್ರಕಾರ, ಕೆಲಸದ ನಿಮಿತ್ತ ಪರಿಚಯಸ್ಥರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಕೊಕ್ಕಡ ಕಾಪಿನಬಾಗಿಲು ಬಳಿ ಕೆಲವರು ಕಾರನ್ನು ತಡೆದು ನಿಲ್ಲಿಸಿ, ಕಾರಿನಲ್ಲಿದ್ದ ಬಾಲಕಿಯ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಶೈಕ್ ಮುಕ್ತಾರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 106/2026ರಂತೆ BNSನ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಧನುಷ್ (23), ದಿನೇಶ್ (45), ಪೂರ್ಣಕ್ಷ ಬಿ. (40), ಸೂರಜ್ (25) ಹಾಗೂ ರಂಜಿತ್ ಬಂಡಾರಿ (29) ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬಾಲಕಿಯ ತಾಯಿಯಿಂದ ಪ್ರತಿದೂರು

ಇದೇ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಾಯಿ ಕೂಡ ಪೊಲೀಸರಿಗೆ ಪ್ರತಿದೂರು ನೀಡಿದ್ದಾರೆ. ಶೈಕ್ ಮುಕ್ತಾರ್ (52) ಎಂಬವರು ತನ್ನ ಮಗಳನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಕರೆದೊಯ್ದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ತಾಯಿಯ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ZERO FIR 03/2026ರಂತೆ BNS ಕಲಂ 137(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎರಡೂ ದೂರುಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.