ಆ.16ರಂದು ಕೊಡಗಿಗೆ ಸಿಎಂ ಡಿ.ಕೆ. ಶಿವಕುಮಾರ್ : ಭಾಗಮಂಡಲ, ತಲಕಾವೇರಿಯಲ್ಲಿ ವಿಶೇಷ ಪೂಜೆ

0
18

ಕೊಡಗು : ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಆಗಸ್ಟ್ 16ರಂದು ಕೊಡಗಿಗೆ ಆಗಮಿಸಲಿರುವ ಡಿ.ಕೆ. ಶಿವಕುಮಾರ್ ಅವರು ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ಪ್ರವಾಸವನ್ನು ಆರಂಭಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಭಾಗಮಂಡಲ ಹೆಲಿಪ್ಯಾಡ್‌ಗೆ ಆಗಮಿಸಲಿರುವ ಅವರು, ಬಳಿಕ ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಿದ್ದಾರೆ.

ನಂತರ ತಲಕಾವೇರಿಗೆ ತೆರಳಿ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಲಿದ್ದು, ಬಳಿಕ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಪ್ರವಾಸದ ಕಾರ್ಯಕ್ರಮದ ವಿವರಗಳನ್ನು ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಹೀಗಾಗಿ ಅವರ ಕೊಡಗು ಪ್ರವಾಸದ ಬಗ್ಗೆ ಜಿಲ್ಲೆಯ ಜನರಲ್ಲಿ ವಿಶೇಷ ಕುತೂಹಲ ಮೂಡಿದೆ.

ಕಳೆದ ವರ್ಷದ ಮಾರ್ಚ್ 21ರಂದು ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ತಲಕಾವೇರಿಗೆ ಭೇಟಿ ನೀಡಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲಿಂದ ಪವಿತ್ರ ಕಾವೇರಿ ತೀರ್ಥವನ್ನು ಬೆಂಗಳೂರಿಗೆ ಕೊಂಡೊಯ್ದು ಕಾವೇರಿ ಆರತಿಯಲ್ಲಿ ಬಳಸಲಾಗಿತ್ತು.

ಇದೀಗ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಕಾವೇರಿ ನಾಡಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 16ರ ಅವರ ಕೊಡಗು ಪ್ರವಾಸ ಮಹತ್ವ ಪಡೆದುಕೊಂಡಿದೆ.