ಕಡಂದಲೆ: ಇಲ್ಲಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಡಂದಲೆ ಮೈನ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಶ್ರೀಮತಿ ರಾಧಿಕಾ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು.
ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಪಾಲಡ್ಕ ಗ್ರಾಮ ಪಂಚಾಯತ್ ಸದಸ್ಯ ರಂಜಿತ್ ಭಂಡಾರಿ, “ಶಾಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ವಿದ್ಯಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಊರವರು ಒಗ್ಗೂಡಿ ಕೈಜೋಡಿಸಬೇಕು” ಎಂದು ಮನವಿ ಮಾಡಿದರು.
ಮುಖ್ಯ ಶಿಕ್ಷಕಿ ಲಿಡಿಯ ಸೇರವೋ ಮಾತನಾಡಿ, “ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸತ್ಪ್ರಜೆಗಳಾಗಿ ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡುವುದೇ ನಿಜವಾದ ದೇಶಭಕ್ತಿ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಗಾಯನ, ಭಾಷಣ, ಚಿತ್ರಕಲೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ 50 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಕಡಂದಲೆಯ ಕಾರ್ತಿಕೇಯ ಫ್ರೆಂಡ್ಸ್ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ನೀರಿನ ಬಾಟಲಿಗಳನ್ನು ವಿತರಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನದ ಸಂಪೂರ್ಣ ವೆಚ್ಚವನ್ನು ಎಸ್‌ಡಿಎಂಸಿ ಉಪಾಧ್ಯಕ್ಷ ನಾಗರಾಜ್ ಪೂಜಾರಿ ಬೊಮ್ಮಲಗುಡ್ಡೆ ಅವರು ಭರಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಗೋಲ್ಡಡಿಯ ಸ್ಕಂದ ಫ್ರೆಂಡ್ಸ್ ವತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರಿಗೂ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಸಂತೋಷ್ ಶೆಟ್ಟಿ ಪರಾರಿ, ಕೇಶವ ಶೆಟ್ಟಿ ಮಾನ್ಯಡ್ಕ, ದಯಾನಂದ ನಾಯ್ಕ, ರಾಧಿಕಾ ಆರಾಧ್ಯ, ಪಾಲಡ್ಕ ಗ್ರಾಮ ಪಂಚಾಯತ್ ಹಾಗೂ ದಿ. ಸಂಜೀವ ಪೂಜಾರಿ ಅವರ ಸ್ಮರಣಾರ್ಥ ಸ್ವರ್ಣಾ ಅವರ ಪ್ರಾಯೋಜಕತ್ವದಲ್ಲಿ ಸಿಹಿತಿಂಡಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ರಾಧಿಕಾ, ಉಪಾಧ್ಯಕ್ಷ ನಾಗರಾಜ್ ಪೂಜಾರಿ ಬೊಮ್ಮಲಗುಡ್ಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಶೆಟ್ಟಿ ಹೋಯಿಗೆಮನೆ, ಕೋಶಾಧಿಕಾರಿ ಕೇಶವ ಶೆಟ್ಟಿ, ಪಾಲಡ್ಕ ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಕಾಂಗ್ಲೈ, ಕರಾಟೆ ಶಿಕ್ಷಕ ಕೇಶವ, ಶಿಕ್ಷಕ ವೃಂದ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಲಿಡಿಯ ಸೇರವೋ ಸ್ವಾಗತಿಸಿದರು. ಸಹ ಶಿಕ್ಷಕಿ ಪುಷ್ಪ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಶ್ರೀಮತಿ ಎಲಿಜಾ ಪೌಲಿನ್ ವಂದಿಸಿದರು. ಶಿಕ್ಷಕ ಶರಣಯ್ಯ ಕಾರ್ಯಕ್ರಮ ನಿರೂಪಿಸಿದರು

