ಹೆಬ್ರಿ: ದೇಶಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯ ಅಪೂರ್ವ ಸಂಗಮಕ್ಕೆ ಸಾಕ್ಷಿಯಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿವಪುರ–1ರಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮವು ಬೆಳಿಗ್ಗೆ 9.15ಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಯಡ್ದೆ ರಾಘವೇಂದ್ರ ಪೂಜಾರಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಆರಂಭಗೊಂಡಿತು.
ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದಯಡ್ದೆ ರಾಘವೇಂದ್ರ ಪೂಜಾರಿ ಮಾತನಾಡಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ದೇಶದ ಭವಿಷ್ಯದ ಪ್ರಜೆಗಳಾಗಿ ಜವಾಬ್ದಾರಿ, ಶಿಸ್ತು, ದೇಶಪ್ರೇಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವಂತೆ ಶುಭ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಶೋಭಾ ಶೆಟ್ಟಿ ಹುಣಸೆಹಾಡಿ ಸುರೇಶ್ ಶೆಟ್ಟಿ, ಮೂರ್ಸಾಲು ಮೋಹನದಾಸ ನಾಯಕ್, ಶ್ರೀಮತಿ ಸುಗಂಧಿ ನಾಯಕ್, ಹೆಬ್ರಿ ತಾಲೂಕು ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರಮೇಶ್ ಕುಮಾರ್, ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ಶ್ರೀಮತಿ ಸುಮಿತ್ರ ನಾಯಕ್, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಅನುಸೂಯ ಹಿರಿಯಡಕ, ಶ್ರೀ ಸದಾನಂದ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಶ್ವೇತಾ ರಾಘವೇಂದ್ರ ಪೂಜಾರಿ ಹಾಗೂ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಯ ಹಳೆ ವಿದ್ಯಾರ್ಥಿ ಶ್ರೀ ರಾಜೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಶಾಲೆಯ ಮೇಲಿನ ಅಪಾರ ಅಭಿಮಾನ ಹಾಗೂ ಕಾಳಜಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಪೋಷಕರು, ಹಳೆ ವಿದ್ಯಾರ್ಥಿಗಳು, ಶಿಕ್ಷಣಾಭಿಮಾನಿಗಳು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಪರಿಶ್ರಮ ಸೇವಾ ತಂಡದ ವತಿಯಿಂದ ವಿದ್ಯಾರ್ಥಿಗಳು ಹಾಗೂ ಕಾರ್ಯಕ್ರಮಕ್ಕೆ ಆಗಮಿಸಿದ ವಿದ್ಯಾಭಿಮಾನಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ದಾನಿಗಳ ಸಹಕಾರದಿಂದ ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.
ಸೇವಾ ಮನೋಭಾವ ಹಾಗೂ ಸಹಕಾರದ ಈ ಕಾರ್ಯವು ಕಾರ್ಯಕ್ರಮದ ಆತ್ಮೀಯತೆಯನ್ನು ಮತ್ತಷ್ಟು ಹೆಚ್ಚಿಸಿತು.
ಧ್ವಜಾರೋಹಣದ ನಂತರ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ, ನಾಡು-ನುಡಿ ಹಾಗೂ ಸಂಸ್ಕೃತಿಯ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ನೆರೆದಿದ್ದ ಗಣ್ಯರು, ಪೋಷಕರು ಹಾಗೂ ಸಾರ್ವಜನಿಕರಿಂದ ಮೆಚ್ಚುಗೆಯ ಚಪ್ಪಾಳೆಗಳ ಸುರಿಮಳೆಯೇ ಹರಿಯಿತು.
ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ಶಾಲೆಯ ಎಲ್ಲಾ ಅಧ್ಯಾಪಕರು ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಯೋಜಿಸಿದರು.

